ತಾಲೂಕು ಆಡಳಿತದಿಂದ ಸಂವಿಧಾನ ದಿನ ಆಚರಣೆ
ಲೋಕದರ್ಶನ ವರದಿ
ಬೀಳಗಿ 28 : ತಾಲೂಕು ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತದ ಸಂವಿಧಾನ ದಿನಾಚರಣೆ ಅಂಗವಾಗಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಯ ಮುಂಭಾಗದಲ್ಲಿ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಬೋಧಿಸಲಾಯಿತು.
ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಶ್ರೀಶೈಲ ಆಂಟಿನ, ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಹನಮಂತ ಕಾಖಂಡಕಿ, ಬಸವರಾಜ ಹಳ್ಳದಮನಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀಶೈಲ ಸೂಳಿಕೇರಿ, ನಗರ ಘಟಕದ ಸಿದ್ದು ಸಾರಾವಾರಿ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಯಮನಪ್ಪ ರೊಳ್ಳಿ ಅವರು ಪುಷ್ಪಮಾಲೆ ಅರ್ಿಸಿ ಗೌರವ ಸಲ್ಲಿಸಿದರು.
ಬಳಿಕ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ ಪಾಟೀಲ ಅವರ ನೇತೃತ್ವದಲ್ಲಿ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚಿಸಲಾಯಿತು. ಈ ವೇಳೆ ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಪ್ರಜೆಗಳಿಗೆ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ಒದಗಿಸುವ ಸಂವಿಧಾನದ ಮಹತ್ವವನ್ನು ಸ್ಮರಿಸಲಾಯಿತು.
ಭಾರತವನ್ನು ಸಾರ್ವಭೌಮ, ಸಮಾಜವಾದಿ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವ ಸಂಕಲ್ಪದೊಂದಿಗೆ, ದೇಶದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಹಾಗೂ ಉಪಾಸನೆಯ ಸ್ವಾತಂತ್ರ್ಯ ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ಕಲ್ಪಿಸುವ ಸಂವಿಧಾನದ ಆಶಯಗಳನ್ನು ಪುನರುಚ್ಚರಿಸಲಾಯಿತು.
ವ್ಯಕ್ತಿಗೌರವ, ರಾಷ್ಟ್ರದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲರಲ್ಲೂ ಭ್ರಾತೃತ್ವದ ಭಾವನೆ ಬೆಳೆಸುವ ಸಂಕಲ್ಪ ಕೈಗೊಳ್ಳಲಾಯಿತು. 1949ರ ನವೆಂಬರ್ 26ರಂದು ಸಂವಿಧಾನ ಸಭೆಯಲ್ಲಿ ಅಂಗೀಕರಿಸಿ, ನಮಗೆ ನಾವೇ ಅರ್ಿಸಿಕೊಂಡ ಸಂವಿಧಾನದ ಆಶಯಗಳನ್ನು ಪಾಲಿಸುವ ಪ್ರತಿಜ್ಞೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಿ.ಎಸ್. ಗಡ್ಡದೇವರಮಠ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದೇವೇಂದ್ರ ಧನಪಾಲ, ಸಿಪಿಐ ಹನಮಂತ ಸಣಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಅದಾಪುರ, ಶಿರಸ್ತೇದಾರ ಸಂಗಮೇಶ ಆರ್. ಚರಂತಿಮಠ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.