ಸಂವಿಧಾನ ದಿನ: ಸಂವಿಧಾನ, ಪ್ರಜಾಪ್ರಭುತ್ವ ರಕ್ಷಣೆಗೆ ಮತ್ತೊಮ್ಮೆ ಪ್ರತಿಜ್ಞೆ ಕೈಗೊಳ್ಳಲು ಖರ್ಗೆ ಕರೆ
ಸಂವಿಧಾನ ದಿನದ ಶುಭಾಶಯ ಕೋರಿದ ಖರ್ಗೆ, ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಜಾತ್ಯತೀತತೆ ಮತ್ತು ಸಮಾಜವಾದದ ತತ್ವಗಳನ್ನು ಎತ್ತಿಹಿಡಿಯುವುದು ಪ್ರತಿಯೊಬ್ಬ ನಾಗರಿಕನ ಪ್ರಮುಖ ರಾಷ್ಟ್ರೀಯ ಹೊಣೆಗಾರಿಕೆ ಎಂದು ಹೇಳಿದರು. ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ಬಲಪಡಿಸಲು ಹಾಗೂ ದೇಶದ ಏಕತೆ ಮತ್ತು ಅಖಂಡತೆಯನ್ನು ಕಾಪಾಡಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಮನವಿ ಮಾಡಿದರು.
ರಾಜಕೀಯ ಮತ್ತು ಸಾಮಾಜಿಕ ಪ್ರಜಾಪ್ರಭುತ್ವದ ನಡುವಿನ ಸಂಬಂಧವನ್ನು ಒತ್ತಿಹೇಳಿದ ಖರ್ಗೆ, ಡಾ. ಬಿ.ಆರ್. ಅಂಬೇಡ್ಕರ್ ಅವರ ಮಾತುಗಳನ್ನು ಉಲ್ಲೇಖಿಸಿದರು. “ಸಾಮಾಜಿಕ ಪ್ರಜಾಪ್ರಭುತ್ವದ ಅಡಿಪಾಯವಿಲ್ಲದೆ ರಾಜಕೀಯ ಪ್ರಜಾಪ್ರಭುತ್ವ ಉಳಿಯಲಾರದು” ಎಂಬ ಅಂಬೇಡ್ಕರ್ ಅವರ ಮಾತುಗಳನ್ನು ಅವರು ಸ್ಮರಿಸಿದರು.
ಆಧುನಿಕ ಭಾರತದ ನಿರ್ಮಾಣಕ್ಕೆ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ನೇತಾಜಿ ಸುಭಾಷ್ ಚಂದ್ರ ಬೋಸ್, ಮೌಲಾನಾ ಅಬುಲ್ ಕಲಾಂ ಆಜಾದ್, ಡಾ. ರಾಜೇಂದ್ರ ಪ್ರಸಾದ್, ಸರೋಜಿನಿ ನಾಯ್ಡು ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ನೀಡಿದ ಕೊಡುಗೆಗಳನ್ನು ಖರ್ಗೆ ಸ್ಮರಿಸಿದರು.
“ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಹಾಗೂ ದೇಶದ ಏಕತೆ, ಅಖಂಡತೆ ಮತ್ತು ಸೌಹಾರ್ದವನ್ನು ಕಾಪಾಡಲು ಮತ್ತೊಮ್ಮೆ ಪ್ರತಿಜ್ಞೆ ಮಾಡೋಣ” ಎಂದು ಕರೆ ನೀಡಿದ ಖರ್ಗೆ, “ಜೈ ಹಿಂದ್, ಜೈ ಸಂವಿಧಾನ್” ಎಂದು ಸಂದೇಶವನ್ನು ಮುಕ್ತಾಯಗೊಳಿಸಿದರು.
1949ರ ನವೆಂಬರ್ 26ರಂದು ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಪ್ರತಿ ವರ್ಷ ನವೆಂಬರ್ 26ರಂದು ಸಂವಿಧಾನ ದಿನ ಆಚರಿಸಲಾಗುತ್ತದೆ. 1950ರ ಜನವರಿ 26ರಂದು ಸಂವಿಧಾನ ಜಾರಿಗೆ ಬಂದು ಭಾರತ ಗಣರಾಜ್ಯವಾಯಿತು.