ಜಿಲ್ಲಾಡಳಿತದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿ ಆಚರಣೆ

Constitution architect Dr. BR Ambedkar Jayanti celebration by district administration

ಜಿಲ್ಲಾಡಳಿತದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿ ಆಚರಣೆ 

ವಿಜಯಪುರ 14:ವಿಶ್ವದ ಸರ್ವಶ್ರೇಷ್ಠ ಸಂವಿಧಾನವನ್ನು ಪ್ರತಿಯೊಬ್ಬ ಭಾರತೀಯನಿಗೆ ಕೊಡುಗೆ ನೀಡುವ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಭದ್ರ ಬುನಾದಿ ಹಾಕಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.  

ನಗರದ ಡಾ.ಬಿ.ಆರ್‌. ಅಂಬೇಡ್ಕರ್ ವೃತ್ತದ ಮುಂಭಾಗದಲ್ಲಿರುವ ಡಾ.ಬಿ.ಆರ್‌. ಅಂಬೇಡ್ಕರ್ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್‌.ಅಂಬೇಡ್ಕರ್ ಅವರ 134ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಡಾ.ಬಿ.ಆರ್‌.ಅಂಬೇಡ್ಕರ್ ಅವರ ಬದುಕು, ಜೀವನ ಸಾಧನೆ ಸಮಗ್ರ ಚಿತ್ರಣ ಕಟ್ಟಿಕೊಡುವ ಹಾಗೂ  ವಿಚಾರ-ಸಂದೇಶಗಳ ಮಾಹಿತಿಯನ್ನುವುಳ್ಳ,  ನವೀಕರಣಗೊಂಡ  ಡಾ.ಬಿ.ಆರ್‌.ಅಂಬೇಡ್ಕರ್ ಭವನದಲ್ಲಿ  ಜಯಂತಿ ಕಾರ್ಯಕ್ರಮ ನಡೆಯುತ್ತಿರುವುದು ವಿಶೇಷವಾಗಿದೆ ಎಂದು ಅವರು ಹೇಳಿದರು.  

ಸಮಾಜದಲ್ಲಿ ಸಮಾನತೆಯ ಹಕ್ಕಿನೊಂದಿಗೆ ರಾಷ್ಟ್ರದ ಏಳಿಗೆಗಾಗಿ ಡಾ.ಬಿ.ಆರ್‌.ಅಂಬೇಡ್ಕರ್ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಅಂಬೇಡ್ಕರ್ ಅವರನ್ನು ಕೇವಲ ಒಂದು ಜಾತಿ, ಸಮುದಾಯಕ್ಕೆ ಸೀಮಿತಗೊಳಿಸಬಾರದು. ಜಾತಿ, ಮತ ಪಂಥಗಳನ್ನು ಮೀರಿ ನಿಂತ ಮೇಧಾವಿಗಳಾಗಿದ್ದಾರೆ.  ಎಲ್ಲರಿಗೂ ಸಮಾನತೆ, ಸ್ವಾತಂತ್ರ್ಯ, ಅಭಿವ್ಯಕ್ತಿ ಮತ್ತು ಗೌರವಯುತವಾಗಿ ಹಾಗೂ ಘನತೆಯಿಂದ ಜೀವನ ನಡೆಸಲು ಸಂವಿಧಾನ ಒದಗಿಸಿಕೊಟಿದ್ದು, ಸಂವಿಧಾನದ ಆಶಯದಂತೆ ನಡೆದುಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.  

ಸರ್ಕಾರ ಪಂಚ ಗ್ಯಾರಂಟಿಗಳನ್ನು ನೀಡುವ ಮೂಲಕ ಸಂವಿಧಾನದ ಆಶಯದಂತೆ ಸರ್ವಜನರ ಬದುಕು ಹಸನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ. ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿ, ಶೋಷಿತ, ಬಡವರ, ಹಿಂದುಳಿದ ವರ್ಗ ಸೇರಿದಂತೆ ಸರ್ವ ಜನಾಂಗದ ಅಭ್ಯುದಯಕ್ಕಾಗಿ ಶ್ರಮಿಸಲಾಗುತ್ತಿದೆ ಎಂದು ಅವರು ಹೇಳಿದರು.  

ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ಡಾ.ಬಿ.ಆರ್‌.ಅಂಬೇಡ್ಕರ್ ಅವರು ಈ ದೇಶಕ್ಕೆ ನೀಡಿದ ಸ್ವಾತಂತ್ರ್ಯ, ಸಮಾನತೆ, ಭಾತೃತ್ವವನ್ನೊಳಗೊಂಡಿರುವ ಸಂವಿಧಾನವಾಗಿದೆ. ಎಲ್ಲ ವರ್ಗದ ಅಭ್ಯುದಯ, ಶೈಕ್ಷಣಿಕ, ಸಾಮಾಜಿಕ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಹೇಳಿದರು.  

ಮಹಾಮಾನವತಾದಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್ ಅವರ ಬದುಕು-ಸಾಧನೆ, ವಿಚಾರ-ಆದರ್ಶಗಳ ಕುರಿತು ಅರಿವು ಮೂಡಿಸುವ ಅಭಿಲಾಷೆಯೊಂದಿಗೆ ನಿರ್ದೇಶನದ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಕೇವಲ 20 ದಿನಗಳಲ್ಲಿ ಅಂಬೇಡ್ಕರ್ ಭವನವನ್ನು ನವೀಕರಣಗೊಳಿಸಲಾಗಿದೆ ಎಂದು ಹೇಳಿದರು.  

ಛಾಯಾಚಿತ್ರ ವಸ್ತು ಸಂಗ್ರಹಾಲಯ, ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸುಸಜ್ಜಿತ ಗ್ರಂಥಾಲಯ, ಡಾ.ಬಿ.ಆರ್‌. ಅವರ ಬದುಕು-ಬರಹ 22 ಸಂಪುಟಗಳು ಸೇರಿದಂತೆ ಅವರ ಜೀವನ ಚರಿತ್ರೆ, ಸಾಧನೆಗಳ ಕುರಿತ ಪುಸ್ತಕಗಳು, ಸುಸಜ್ಜಿತವಾದ ಕಚೇರಿ, ಸಭಾಭವನ ಹೊಂದಿದೆ.  ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯದಲ್ಲಿ ಪುಸ್ತಕ ಇರಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.  

ಚಿಂತಕಿ ಕೆ.ನೀಲಾ ಅವರು ಮಾತನಾಡಿ, ನಿಜವಾದ ಆರ್ಥಿಕ ಅಭಿವೃದ್ದಿ ಬಸವಣ್ಣ ಹಾಗೂ ಅಂಬೇಡ್ಕರ್ ಅವರ ಚಿಂತನೆಗಳಲ್ಲಿ ಜೊತೆಯಾಗಿ ಕಾಣ ಸಿಗುತ್ತವೆ.  ಬಸವರಣ್ಣನವರು ಬಹು ದೊಡ್ಡ ಆರ್ಥಿಕ ತಜ್ಞರಾಗಿದ್ದರು. ಕಾಯಕದ ಮಹತ್ವ ಕುರಿತು ಉದಾತ್ತ ಚಿಂತನೆಗಳನ್ನು ಹೊಂದಿದ್ದರು. ಜನರು ಘನತೆಯಿಂದ ಬದುಕಲು ಆರ್ಥಿಕ ಸ್ವಾತಂತ್ರ ಇರಬೇಕು ಎಂಬುದು ಅಂಬೇಡ್ಕರ್ ಅವರ ಉದಾತ್ತ ಚಿಂತನೆಯಾಗಿತ್ತು. ಮಹಿಳೆಯರ ಹಕ್ಕು ಮತ್ತು ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಅಂಬೇಡ್ಕರ್, ಸ್ತ್ರೀ ಸಬಲೀಕರಣಕ್ಕಾಗಿ ಹೊಂದಿದ ವಿಚಾರಗಳನ್ನು ನಮ್ಮ ಸಂವಿಧಾನದಲ್ಲಿ ಕಾಣಬಹುದಾಗಿದೆ ಎಂದು ಅವರು ಹೇಳಿದರು.  

ಬಸವತತ್ವ ಪ್ರಚಾರಕರಾದ ಡಾ. ಜೆ.ಎಸ್‌.ಪಾಟೀಲ ಅವರು ಡಾ.ಬಿ.ಆರ್‌.ಅಂಬೇಡ್ಕರ್ ಹಾಗೂ ಸಂವಿಧಾನ ರಚನೆ ಕುರಿತು ಉಪನ್ಯಾಸ ನೀಡಿದರು.  

ಅಂಬೇಡ್ಕರ್ ಭವನ ನವೀಕರಣಕ್ಕೆ ವಿಶೇಷ ಮುತುವರ್ಜಿ ವಹಿಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಜಿ.ಎನ್‌.ಮಲಜಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ನಿರ್ಮಿತಿ ಕೇಂದ್ರದ ಆಕಾಶ ಅವರನ್ನು ಸನ್ಮಾನಿಸಲಾಯಿತು. ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರಮಾಣ ಪತ್ರ ನೀಡಲಾಯಿತು.  

ನವೀಕರಣಗೊಂಡ ಡಾ.ಬಿ.ಆರ್‌.ಅಂಬೇಡ್ಕರ್ ಭವನದಲ್ಲಿನ ಗ್ರಂಥಾಲಯ  ಉದ್ಘಾಟನೆ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್ ರವರ ಕುರಿತ ಸಂದೇಶ ಸಾರುವ ಛಾಯಾಚಿತ್ರಗಳನ್ನು ಅನಾವರಣಗೊಳಿಸಲಾಯಿತು. ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಲಾಯಿತು. 

ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮಾಜಿ ಶಾಸಕ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್ ಭವನ ನಿರ್ಮಾಣ ಮೇಲುಸ್ತುವಾರಿ ಸಮಿತಿ ಸದಸ್ಯ ರಾಜು ಆಲಗೂರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೇರಿದಂತೆ ವಿವಿಧ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.  

ಜಯಂತಿ ಕಾರ್ಯಕ್ರಮಕ್ಕೂ ಮೊದಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು  ಭಾರತ ರತ್ನ ಡಾ.ಬಿ.ಆರ್‌.ಅಂಬೇಡ್ಕರ್ ಅವರ 134ನೇ ಜಯಂತಿ ಅಂಗವಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಪ್ರತಿಮೆಗೆ ಮಾಲಾರೆ​‍್ಣ ಮಾಡಿ ಗೌರವ ಸಲ್ಲಿಸಿದರು.  

ಭವ್ಯ ಮೆರವಣಿಗೆಗೆ ಚಾಲನೆ : ನಗರದ ಜಲನಗರದ ಬುದ್ದವಿಹಾರದ ಆವರಣದಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್ ರವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು. ಬುದ್ಧವಿಹಾರದಿಂದ ಆರಂಭವಾದ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಭಾವಚಿತ್ರ ಭವ್ಯ ಮೆರವಣಿಗೆಯೂ ವಿವಿಧ ಜಾನಪದ ಕಲಾತಂಡದೊಂದಿಗೆ, ನಗರದ ಬಾಗಲಕೋಟ ಕ್ರಾಸ್, ಕೆ.ಸಿ.ಮಾರ್ಕೆಟ್, ಮಹಾತ್ಮಗಾಂಧಿ ವೃತ್ತ, ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಅಂಬೇಡ್ಕರ್ ಭವದವರೆಗೆ ಸಾಗಿ ಸಮಾವೇಶಗೊಂಡಿತು.  

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ಅಭಿಷೇಕ ಚಕ್ರವರ್ತಿ ಸೇರಿದಂತೆ ವಿವಿಧ ಸಮಾಜದ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.