ಸಂವಿಧಾನ ಪ್ರತಿಯೊಬ್ಬ ಭಾರತೀಯನ ಆಸ್ತಿ: ಪ್ರೊ. ಬಿ.ಎಲ್. ಲಕ್ಕಣ್ಣನವರ
ಲೋಕದರ್ಶನ ವರದಿ
ವಿಜಯಪುರ 26 : ಸಂವಿಧಾನವು ಯಾವುದೇ ಧರ್ಮ ಅಥವಾ ಜನಾಂಗಕ್ಕೆ ಸೀಮಿತವಾದುದಲ್ಲ. ಅದು ಇಡೀ ಭಾರತೀಯರ ಆಸ್ತಿಯಾಗಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬದುಕುವ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ಕಲ್ಪಿಸಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್. ಲಕ್ಕಣ್ಣನವರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ನ. 26 ರಂದು ಹಮ್ಮಿಕೊಂಡಿದ್ದ ಭಾರತದ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂವಿಧಾನದ ಮಹತ್ವವನ್ನು ಸ್ಮರಿಸಿದ ಅವರು ಭಾರತದಂತ ವಿವಿಧತೆ ನೆಲೆಸಿರುವ ರಾಷ್ಟ್ರದಲ್ಲಿ ಸಮಾಜವನ್ನು ಒಗ್ಗೂಡಿಸುವ ಪ್ರಯತ್ನವನ್ನು ಸಂವಿಧಾನ ಮಾಡುತ್ತದೆ.
ವಿದ್ಯಾರ್ಥಿನಿಯರು ಸಂವಿಧಾನವನ್ನು ಅಧ್ಯಯನ ಮಾಡಿ, ಅದರ ಅಂಶಗಳನ್ನು ಜೀವನದಲ್ಲಿ ಅನುಷ್ಠಾನಗೊಳಿಸಿಕೊಳ್ಳಬೇಕು. ಸಮಾಜದ ಪ್ರತಿಯೋರ್ವ ನಾಗರಿಕರು ಒಗ್ಗಟ್ಟಾಗಿ ಶ್ರಮಿಸಿದರೆ ಸಂವಿಧಾನ ಸಮರ್ಕವಾಗಿ ಅನುಷ್ಠಾನಗೊಳ್ಳುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪ್ರೊ. ಸಕ್ಪಾಲ್ ಹೂವಣ್ಣ ಮಾತನಾಡಿ, ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೋರಾಟ ಮತ್ತು ಕೊಡುಗೆಗಳನ್ನು ವಿದ್ಯಾರ್ಥಿನಿಯರು ಸ್ಮರಿಸಬೇಕು.
ಸಮಾಜದಲ್ಲಿ ಶೋಷಣೆಗೊಳಗಾದವರು, ಮಹಿಳೆಯರು ಹಾಗೂ ನಿರ್ಗತಿಕರ ಸುಸ್ಥಿರ ಬದುಕನ್ನು ಗಮನದಲ್ಲಿಟ್ಟುಕೊಂಡು ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನ ಶ್ರೇಷ್ಠವಾದುದು. ಇದು ಪ್ರತಿಯೊಬ್ಬ ಭಾರತೀಯನ ಅಭಿವೃದ್ಧಿಗೆ ಮಾರ್ಗದರ್ಶನ ನೀಡುವುದರ ಜತೆಗೆ ಪ್ರತಿಯೊಬ್ಬರಿಗೂ ಕಾನೂನಾತ್ಮಕ ರಕ್ಷಣೆಯನ್ನು ಒದಗಿಸುತ್ತದೆ. ಈ ನಿಟ್ಟಿನಲ್ಲಿ ಅಂಬೇಡ್ಕರ್ ಅವರು ಅಪಾರ ಶ್ರಮ ವಹಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಡೀನರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು ಹಾಗೂ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಾಯಕ ನಿರ್ದೇಶಕ ಡಾ. ಸಂದೀಪ್ ನಾಯಕ್ ಸ್ವಾಗತಿಸಿ, ನಿರೂಪಿಸಿದರು. ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಪ್ರೊ. ಹನುಮಂತಯ್ಯ ಪೂಜಾರಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ. ಅನಿತಾ ನಾಟಿಕಾರ್ ವಂದಿಸಿದರು.