ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಚಾಲನೆ

ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಚಾಲನೆ  Construction of Ambedkar Bhavan in the town gets underway

ಲೋಕದರ್ಶನ ವರದಿ 

ದೇವರಹಿಪ್ಪರಗಿ, ಸೆ.18: ಪಟ್ಟಣದ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಪ್ರತಿಭಟನೆ ಸ್ಥಳಕ್ಕೆ ವಿಜಯಪುರ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಒದ್ರಾಮ್ ಭೇಟಿ ನೀಡಿ, ಪ್ರತಿಭಟನಾಕಾರರ ಅಹವಾಲು ಆಲಿಸಿದರು.  

ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸುತ್ತಿದ್ದ ದಸಂಸ ಜಿಲ್ಲಾ ಸಂಚಾಲಕ ಪ್ರಕಾಶ ಗುಡಿಮನಿ ನೇತೃತ್ವದ ತಂಡದಿಂದ ವಿವಿಧ ಬೇಡಿಕೆಗಳ ಕುರಿತು ಮಾಹಿತಿ ಪಡೆದ ಹೆಚ್ಚುವರಿ ಜಿಲ್ಲಾಧಿಕಾರಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.  

ಈ ಸಂದರ್ಭದಲ್ಲಿ ಪಟ್ಟಣದಲ್ಲಿ ಸುಮಾರು ?2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ್ ಪೊತದಾರ್, ಡಿವೈಎಸ್ಪಿ ಟಿ.ಎಸ್‌. ಸುಲ್ಫಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಚಾಲನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.  

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯ ಜಾಗ ಲಭ್ಯವಿದ್ದು, ಸರ್ಕಾರದ ನಿಯಮಾನುಸಾರ ಕಾಮಗಾರಿ ಕೈಗೊಳ್ಳಲಾಗುವುದು. ಸ್ಥಳೀಯ ಮುಖಂಡರ ಒತ್ತಾಯದ ಮೇರೆಗೆ ಸರ್ಕಾರ ಹೆಚ್ಚಿನ ಅನುದಾನ ನೀಡಿದರೆ ಭವನಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.  

ತಮ್ಮ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ ಪ್ರತಿಭಟನಾಕಾರರು ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು.  ಈ ಸಂದರ್ಭದಲ್ಲಿ ತಹಶೀಲ್ದಾರ್ ನಿಂಗಣ್ಣ ಬಿರಾದಾರ, ತಾಪಂ ಇಒ ಭಾರತಿ ಚೆಳುವಯ್ಯ, ಪಿಎಸ್‌ಐ ಸಚಿನ್ ಆಲಮೇಲಕರ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಭವಾನಿ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.