ಸರಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣ ಕಾಮಗಾರಿ ಪ್ರಾರಂಭ
ಶಾಸಕ ರಮೇಶ ಜಾರಕಿಹೊಳಿ ಹೇಳಿಕೆ: ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ ಕಾಮಗಾರಿ ವೀಕ್ಷಣೆ
ಗೋಕಾಕ 24: ಪ್ರಾಯೋಗಿಕವಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ತಾಲೂಕಾ ಆಸ್ಪತ್ರೆಯಲ್ಲಿ ಪಿಎಸ್ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕ ಅಳವಡಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಆ ನಿಟ್ಟಿನಲ್ಲಿ ನಗರದ ಸರಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕದ ನಿರ್ಮಾಣ ಕಾಮಗಾರಿಗಳು ಪ್ರಾರಂಭವಾಗಿದ್ದು ಬರುವ ಒಂದು ವಾರದಲ್ಲಿ ಈ ಕಾಮಗಾರಿ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 1.5 ಕೋಟಿ ವೆಚ್ಚದಲ್ಲಿ ವಿಎಸ್ಎ ತಂತ್ರಜ್ಞಾನವುಳ್ಳ 500 ಎಲ್ಪಿಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ ಕಾಮಗಾರಿಯನ್ನು ಗುರುವಾರದಂದು ವೀಕ್ಷಣೆ ಮಾಡಿ ಅವರು ಮಾತನಾಡಿದರು.
ಸಾರ್ವಜನಿಕರಿಗೆ ಇದು ಅತ್ಯಂತ ಉಪಯುಕ್ತವಾಗಲಿದೆ. ಕೊರೋನಾ ಮೂರನೇ ಅಲೆ ಎದುರಿಸಲು ಈ ಆಕ್ಸಿಜನ ಪ್ಲಾಂಟ್ ತುಂಬಾ ಉಪಯುಕ್ತವಾಗಲಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಮಾಜಿ ಜಿಪಂ ಸದಸ್ಯ ಟಿ.ಆರ್.ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ ತಾಲೂಕು ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ಡಾ.ಕೋಣಿ, ಡಾ. ಬಾಗಲಕೋಟೆ, ಡಾ.ಅಶೋಕ ಜಿರಗ್ಯಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.