ಇಲಾಖೆ ಮತ್ತು ಅಧಿಕಾರಿಗಳಲ್ಲಿ ಸಮನ್ವಯತೆ ಬೇಕು: ಜಿಲ್ಲಾಧಿಕಾರಿ ಸ್ನೇಹಲ್ ಆರ್
Coordination is needed between the department and officials: Deputy Commissioner Snehal R
ಧಾರವಾಡ ಮಾ.05: ಜೀತ ಪದ್ಧತಿಯು ಒಂದು ಅನಿಷ್ಠ ಸಂಪ್ರದಾಯವಾಗಿದೆ. ಇದು ಸಮಾನತೆ ಮತ್ತು ಮಾನವ ವಿರೋಧಿಯಾಗಿದೆ. ಇದನ್ನು ತಡೆಗಟ್ಟಲು ಸಮಾಜದ ಎಲ್ಲರೂ ಕೈಜೋಡಿಸಬೇಕು. ಮತ್ತು ವಿಶೇಷವಾಗಿ ಸಂಬಂಧಿಸಿದ ಇಲಾಖೆಗಳ ಮತ್ತು ಅಧಿಕಾರಿಗಳಲ್ಲಿ ಪರಸ್ಪರ ಸಮನ್ವಯತೆ ಸಾಧಿಸಬೇಕು. ಅಂದಾಗ ಮಾತ್ರ ಜೀತ ಪದ್ಧತಿಯನ್ನು ಸಂಪೂರ್ಣವಾಗಿ ತೊಲಗಿಸಿ, ಜೀತ ಮುಕ್ತ ಜಿಲ್ಲೆ ಹಾಗೂ ಸಮಾಜವನ್ನು ರೂಪಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದರು.
ಅವರು, ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಇಂದು (ಮಾ.5) ಬೆಳಿಗ್ಗೆ, ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಜೀತ ಪದ್ಧತಿ (ರದ್ಧತಿ) ಕಾಯ್ದೆ 1976 ಹಾಗೂ ಬಾಲ ಮತ್ತು ಕಿಶೋರ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ ಕಾಯ್ದೆ 2016 ರ ಕುರಿತು (ಕಲಂ 17 ರಡಿ) ನೇಮಕಗೊಂಡ ಜೀತ ಪದ್ಧತಿ ನಿಷೇದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದರು.
ಜೀತ ಪದ್ಧತಿ ದಾಸ್ಯದ ಸಂಕೇತ. ಜೀತ ಮುಕ್ತ ಸಮಾಜವಾಗಲು ಮತ್ತು ಪರಸ್ಪರಲ್ಲಿ ಸಮಾನತೆ ಸಾಧಿಸಲು ಸರ್ಕಾರಗಳು ಅನೇಕ ಕಾಯ್ದೆ ಕಾನೂನುಗಳನ್ನು ಅನುಷ್ಠಾನಗೊಳಿಸಿವೆ. ಅಧಿಕಾರಿಗಳ ಇಚ್ಛಾಶಕ್ತಿಯಿಂದ ಮಾತ್ರ ಇವು ಪರಿಣಾಮಕಾರಿಯಾಗಿ ಜಾರಿಯಾಗಲು ಸಾಧ್ಯವಿದೆ. ಅಧಿಕಾರಿಗಳಲ್ಲಿ ಜೀತ ಪದ್ಧತಿಯನ್ನು ಸಮಾಜದಿಂದ ತೊಲಗಿಸಲು ಸಂಕಲ್ಪ ಮಾಡಿ, ಕರ್ತವ್ಯ ನಿರ್ವಹಿಸಬೇಕು. ಅಂದಾಗ ಕಾಯ್ದೆಗೆ ಬೆಲೆ ಮತ್ತು ಪ್ರಯತ್ನಗಳಿಗೆ ಗೌರವ ಸಿಗುತ್ತದೆ. ಸಮಾಜದಲ್ಲಿ ಸಮಾನತೆ ಸಾಧಿಸಲು ಜೀತ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ಜೀತ ಪದ್ಧತಿ ನಿಷೇಧ ಕಾನೂನು ಜಾರಿಗೆ ಬಂದು ಐವತ್ತು ವರ್ಷಗಳಾದರೂ ಇನ್ನೂ ಕೆಲವು ಕಡೆ ಈ ಪದ್ಧತಿ ಕಂಡು ಬರುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಆದ್ದರಿಂದ ಈ ಅನಿಷ್ಠ ಪದ್ಧತಿಯನ್ನು ತಡೆಗಟ್ಟಲು ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಿ ಕೆಲಸ ಮಾಡಬೇಕು ಎಂದು ಅವರು ಹೇಳಿದರು.
ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿಯೊಬ್ಬರೂ ಜಾಗೃತರಾಗಬೇಕು. ಹಾಗೂ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕಾರ್ಯನಿರ್ವಹಿಸಬೇಕು. ಕಾನೂನು ಹೇಗೆ ಹೇಳುತ್ತದೆಯೋ ಅದೇ ರೀತಿಯಲ್ಲಿ ಕಾನೂನಿನ ಅಡಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು. ಸಮಾಜದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ ಎಲ್ಲರೂ ಜಾಗೃತಿಯಿಂದ ಗಮನ ವಹಿಸಬೇಕು ಎಂದು ಅವರು ತಿಳಿಸಿದರು.
ಸಮಾಜದ ಶಾಂತಿ ಮತ್ತು ಸಮಾನತೆಯನ್ನು ಕಾಪಾಡಲು ಸಾರ್ವಜನಿಕರ ಸಹಕಾರ ಮುಖ್ಯವಾಗುತ್ತದೆ. ಮತ್ತು ರಜಾ ದಿನಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಕಳುಹಿಸುವುದನ್ನು ತಡೆಯಬೇಕು. ಹಾಗೂ ಬಾಲಕಾರ್ಮಿಕರಾಗಿ ಅವರು ದುಡಿಯದಂತೆ ವಿಶೇಷ ಕಾಳಜಿ ವಹಿಸಬೇಕು. ಮಕ್ಕಳ ಶಿಕ್ಷಣ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಶಾಲೆಗೆ ಹಾಜರಾಗುವಂತೆ ಪ್ರೋತ್ಸಾಹಿಸಬೇಕು ಎಂದು ಅವರು ತಿಳಿಸಿದರು. ಒಂದು ವೇಳೆ ಮಕ್ಕಳು ಶಾಲೆಯನ್ನು ಬಿಟ್ಟು ಕೆಲಸಕ್ಕೆ ಹೋಗುತ್ತಿರುವುದು ಕಂಡುಬಂದರೆ, ಸಂಬಂಧಿಸಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಮಕ್ಕಳಿಗೆ ಮತ್ತು ಅವರ ಪೋಷಕರಿಗೆ ಅರಿವು ಮೂಡಿಸಿ, ಮಕ್ಕಳನ್ನು ಮರುಶಾಲೆಗೆ ಕರೆತರುವ ಕಾರ್ಯವನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್. ದೊಡ್ಡಮನಿ ಅವರು ಮಾತನಾಡಿ, ಯಾವುದೇ ಕ್ಷೇತ್ರದಲ್ಲಿ ಜನರನ್ನು ಜೀತಕ್ಕೆ ಇಟ್ಟುಕೊಂಡು ಅವರಿಗೆ ಕನಿಷ್ಠ ವೇತನ, ಊಟ, ವಸತಿ, ವೈದ್ಯಕೀಯ ಸೌಲಭ್ಯ ಸೇರಿದಂತೆ ಹಲವಾರು ಮೂಲಭೂತ ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡಿ, ಹೊರಗಿನ ಜಗತ್ತನ್ನು ಕಾಣದಂತೆ ಅವರನ್ನು ಕೂಡಿ ಹಾಕುವಂತಹ ಹಲವಾರು ಅಮಾನವೀಯ ಘಟನೆಗಳು ಸಮಾಜದಲ್ಲಿ ಆಗಾಗ ಕಂಡು ಬರುತ್ತಿವೆ. ಇದನ್ನು ತಡೆಗಟ್ಟಲು ವಿವಿಧ ಇಲಾಖೆಗಳು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಬಹಳಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ಅರಿವು ಮೂಡಿಸಲಾಗುತ್ತಿದೆ. ಅಷ್ಟೇ ಅಲ್ಲದೇ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಜಿಲ್ಲಾಮಟ್ಟದಲ್ಲಿ ಜೀತ ಪದ್ಧತಿಗಳ ಕುರಿತು ಅಧಿಕಾರಿಗಳಿಗೆ ಅಗತ್ಯವಾದ ತರಬೇತಿ ನೀಡುವುದು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು. ಜಿಲ್ಲೆಯಲ್ಲಿರುವ ಕೈಗಾರಿಕಾ ಪ್ರದೇಶಗಳಿಗೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ, ಪರೀಶೀಲನೆ ನಡೆಸಬೇಕು. ಕಾರ್ಮಿಕರಿಗೆ ನ್ಯಾಯಯುತವಾಗಿ ದೊರಕಬೇಕಾದ ಸೌಲಭ್ಯ, ಯೋಜನೆಗಳು ಅವರಿಗೆ ಸರಿಯಾಗಿ ತಲುಪುತ್ತಿವೆಯೇ ಎಂಬುದರ ಬಗ್ಗೆ ವಿಶೇಷ ಗಮನ ಹರಿಸಬೇಕು ಎಂದು ತಿಳಿಸಿದರು.
ಯಾವುದೇ ಕಾರ್ಮಿಕರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಕರ್ತವ್ಯವಾಗಿದೆ. ಕಾರ್ಮಿಕರ ಕುರಿತು ಯಾವುದೇ ಮಾಹಿತಿ ಬಂದಾಗ ಅದನ್ನು ನಿರ್ಲಕ್ಷ್ಯ ಮಾಡದೇ ನಿಷ್ಪಕ್ಷಪಾತವಾಗಿ ಪರೀಶೀಲಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಹೇಳಿದರು. ರಾಜ್ಯ ಉನ್ನತ ಅಧಿಕಾರಿ ಸಮಿತಿ ಸದಸ್ಯ ವಿಲಿಯಂ ಕ್ರಿಸ್ಟೋಫರ್ ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ವಿ.ಏಣಗಿ ಅವರು ಕಾರ್ಯಾಗಾರದ ಮಹತ್ವದ ಕುರಿತು ಮಾತನಾಡಿದರು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಉಪ ಪೊಲೀಸ್ ಆಯುಕ್ತ ರವೀಶ ಸಿ.ಆರ್., ಬೆಳಗಾವಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಡಿ.ಜಿ.ನಾಗೇಶ, ಸಹಾಯಕ ಕಾರ್ಮಿಕ ಆಯುಕ್ತ ಸಚಿನ ವಾಯ್. ಹಳೇಮನಿ ಹಾಗೂ ಇದ್ದರು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ರಾಜ್ಯ ಉನ್ನತ ಅಧಿಕಾರಿ ಸಮಿತಿ ಸದಸ್ಯ ವಿಲಿಯಂ ಕ್ರಿಸ್ಟೋಫರ್, ಐ.ಜಿ.ಎಂ. ಸಂಸ್ಥೆಯ ಪ್ರೇಮಲತಾ, ಸ್ಪಂದನ ಸ್ವಯಂ ಸೇವಾ ಸಂಸ್ಥೆಯ ನಿರ್ದೇಶಕಿ ವ್ಹಿ.ಸುಶಿಲಾ ಅವರು ವಿವಿಧ ಕಾಯ್ದೆ ಹಾಗೂ ಅಧಿಕಾರಿಗಳ ಕರ್ತವ್ಯಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಮಾರಿಕಾಂಬಾ ಕುಲಕೋಟಿ ಸ್ವಾಗತಿಸಿದರು. ಅಶೋಕ ಒಡೆಯರ ನಿರೂಪಿಸಿದರು. ಬಸವರಾಜ ಪಂಚಾಕ್ಷರಿಮಠ ವಂದಿಸಿದರು. ಕಾರ್ಯಾಗಾರದಲ್ಲಿ ತಹಶೀಲ್ದಾರರಾದ ಡಾ. ಡಿ.ಎಚ್.ಹೂಗಾರ, ಮಹೇಶ ಗಸ್ತಿ, ಜೆ.ಬಿ.ಮಜ್ಜಗಿ, ರಾಜು ಮಾವರಕರ್ ಹಾಗೂ ಹಿರಿಯ ಕಾರ್ಮಿಕ ನೀರೀಕ್ಷಕರಾದ ರಜನಿ ಹಿರೇಮಠ, ಮಿನಾಕ್ಷಿ ಅ. ಶಿಂದಿಹಟ್ಟಿ, ಭುವನೇಶ್ವರಿ ಕೋಟಿಮಠ, ಅಕ್ರಂ ಅಲ್ಲಾಪುರ, ಸಂಗೀತಾ ಬೆನಕನಕೊಪ್ಪ ಹಾಗೂ ಕಂದಾಯ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 