ಕಾರವಾರ

ಭ್ರಷ್ಟಾಚಾರ ಆರೋಪ: ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹ

ಭ್ರಷ್ಟಾಚಾರ ಆರೋಪ: ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹ

ಕಾರವಾರ ೨೪: ಭ್ರಷ್ಟಾಚಾರದ ಆರೋಪಕ್ಕೆ ಒಳಗಾಗಿ ಸಚಿವ ಸ್ಥಾನ ಕಳೆದುಕೊಂಡಿದ್ದ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಆರೋಪಿಸಿದರು. 

ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಹಳಿಯಾಳ ವಿಧಾನಸಭಾ ಕ್ಷೇತ್ರದಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ನಾಗೇಂದ್ರ ಅವರ ರಾಜೀನಾಮೆ ಪಡೆಯಲಾಗಿತ್ತು. ಇದೀಗ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದು ಜನತೆಗೆ ಮಾಡಿದ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ನಿಗಮದ ಹಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸಿ ಪರಿಶಿಷ್ಟ ಜಾತಿಯ ಜನರಿಗೆ ಅನ್ಯಾಯ ಮಾಡಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯಗಳನ್ನು ಕಾಂಗ್ರೆಸ್ ಸರ್ಕಾರ ದುರ್ಬಲಗೊಳಿಸುತ್ತಿದೆ ಎಂದು ಅವರು ಆರೋಪಿಸಿದರು. 

ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ಸಚಿವ ನಾಗೇಂದ್ರ ಅವರು ಇನ್ನೂ ಆರೋಪಮುಕ್ತರಾಗಿಲ್ಲ. ಆದ್ದರಿಂದ ಕೂಡಲೇ ರಾಜೀನಾಮೆ ಪಡೆಯಬೇಕು ಅಥವಾ ಅವರನ್ನು ಸಚಿವ ಸಂಪುಟದಿAದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಈ ಕುರಿತು ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. 

ಜಿಲ್ಲಾ ಅಧ್ಯಕ್ಷ ಎನ್.ಎಸ್.ಹೆಗಡೆ ಮಾತನಾಡಿ, ಪ್ರತಿದಿನ ಒಂದೊAದು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ. ಧರಣಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. 

ಮಾಜಿ ಶಾಸಕ ಸುನೀಲ್ ಹೆಗಡೆ ಮಾತನಾಡಿ, ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರಿಗೆ ಸಚಿವ ಸಂಪುಟದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ. ಅವರು ರಾಜೀನಾಮೆ ನೀಡಬೇಕು, ಇಲ್ಲವಾದರೆ ಸರ್ಕಾರವೇ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. 

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ನಾಯ್ಕ, ಗುರುಪ್ರಸಾದ್ ಹೆಗಡೆ, ಶಿವಾಜಿ ನರಸಾನಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸುದ್ದಿ ಓದಿ