ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ: ಶಾಸಕ ರಾಜುಗೌಡ
ದೇವರಹಿಪ್ಪರಗಿ 25: ‘ಗ್ರಾಮೀಣ ಭಾಗದಲ್ಲಿ ಸಿ.ಸಿ ರಸ್ತೆ ನಿರ್ಮಾಣ, ದೇವಸ್ಥಾನಗಳ ಜೀರ್ಣೋದ್ಧಾರ, ಸಮುದಾಯ ಭವನಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಯೇ ನನ್ನ ಬದ್ಧತೆ. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ’ ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು. ತಾಲ್ಲೂಕಿನ ಹುಣಶ್ಯಾಳ ಗ್ರಾಮದಲ್ಲಿ ಸೋಮವಾರ ಸುಮಾರು 50ಲಕ್ಷ ರೂ ವೆಚ್ಚದ ಸಿ.ಸಿ.ರಸ್ತೆ, ಸಮುದಾಯ ಭವನಕ್ಕೆ 5 ಲಕ್ಷ ಹಾಗೂ ಮಸೀದಿ ಜೀರ್ಣೋದ್ಧಾರಕ್ಕೆ 5ಲಕ್ಷ ರೂ ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ನನ್ನ ಅಧಿಕಾರ ಅವಧಿಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು,
ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಪ್ರತಿ ಗ್ರಾಮಗಳಿಗೆ ಹಂತ ಹಂತವಾಗಿ ಕಲ್ಪಿಸುವ ಕೆಲಸ ನಿರಂತರವಾಗಿ ನಡೆಯುತ್ತಿದ್ದು. ಯಾವುದೇ ರೀತಿಯ ರಾಜಕೀಯ ಮಾಡದೆ ನಿರಂತರವಾಗಿ ಅಭಿವೃದ್ಧಿ ಕೆಲಸಗಳನ್ನು ಕ್ಷೇತ್ರದ ಜನರ ನೀರೀಕ್ಷೆಗೆ ತಕ್ಕಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇನೆ. ರಸ್ತೆ ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ,ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಪಕ್ಷದ ಮುಖಂಡರು, ಗ್ರಾಮದ ಪ್ರಮುಖರು, ಗಣ್ಯರು,ಕೆ ಆರ್ ಐ ಡಿ ಎಲ್ ವಿಭಾಗದ ಸಹಾಯಕ ಇಂಜಿನಿಯರ್ ಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.