ಕಲ್ಲೋಳ್ಳಿ: ಅಂಗಡಿಕಾರರಿಗೆ ಕೋವಿಡ್ ಕುರಿತು ಜಾಗೃತಿ ಕಾರ್ಯಾಗಾರ
ಗೋಕಾಕ 06: ದೇಶ, ರಾಜ್ಯ ಹಾಗೂ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪಟ್ಟಣದಲ್ಲಿ ವಾಸಿಸುವ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಹಾಗೂ ದೈಹಿಕ ಅಂತರ ಕಾಪಾಡುವುದನ್ನು ಕಡ್ಡಾಯವಾಗಿ ಪಾಲಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿಯೂ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದ್ದು, ಜನರು ಈ ಸಾಂಕ್ರಾಮಿಕವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ನಿರ್ಲಕ್ಷಿಸದೆ, ನಿಯಮಗಳನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಕಲ್ಲೋಳ್ಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅರುಣಕುಮಾರ್ ಹೇಳಿದರು.
ಕಲ್ಲೋಳ್ಳಿ ಪಟ್ಟಣ ಪಂಚಾಯತ್ ಆವರಣದಲ್ಲಿ ಆಯೋಜಿಸಲಾಗಿದ್ದ ಅಂಗಡಿಕಾರರಿಗೆ ಕೋವಿಡ್ -19 ನಿಯಮಾವಳಿ ಕುರಿತು ಮುನ್ನೆಚ್ಚರಿಕಾ ಕ್ರಮಗಳ ತಿಳುವಳಿಕಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮದುವೆ, ಸಭೆ ಸಮಾರಂಭಗಳು, ಜಾತ್ರೆ-ಉತ್ಸವಗಳು ಇಂತಹ ಕಾರ್ಯಕ್ರಮಗಳಲಿ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಸಾವಿರಾರು ಜನರು ಬಂದು-ಹೋಗುವುದರಿಂದ ಕೋವಿಡ್ ಬಹುಬೇಗ ವ್ಯಾಪಕವಾಗಿ ಹರಡುತ್ತದೆ. ಆದ್ದರಿಂದ ಇಂತಹ ಜನಸಂದಣಿ ಪ್ರದೇಶಗಳಿಂದ ದೂರ ಇರಬೇಕಾಗಿದೆ ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಸ್ಥಳೀಯ ವೈದ್ಯರಾದ ಅಶೋಕ್ ಪಾಟೀಲ್ ಮಾತನಾಡಿ, ಯಾವುದೇ ಜ್ವರ, ಕೆಮ್ಮು, ಶೀತ, ತಲೆನೋವಿನಂತಹ ಕೋವಿಡ್-19 ರೋಗದ ಗುಣಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಇದಲ್ಲದೆ 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಹಾಗೂ ಯಾವುದಾದರೂ ದೀರ್ಘಕಾಲಿನ ಕಾಯಿಲೆಗಳಿಂದ ಬಳಲುತ್ತಿರುವ 45 ರಿಂದ 60 ವರ್ಷ ವಯೋಮಾನದವರು ಕಡ್ಡಾಯವಾಗಿ ಲಸಿಕೆಯನ್ನು ಪಡೆದುಕೊಳ್ಳಬೇಕು. ಒಟ್ಟಿನಲ್ಲಿ , ಕೋವಿಡ್-19 ಹರಡದಂತೆ ತಡೆಗಟ್ಟಲು ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಜಾರಿ ಮಾಡಿರುವ ಹೊಸ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು.
ಆರೋಗ್ಯ ನಿರೀಕ್ಷಕರಾದ ಸುಭಾಷ್ ಕಾಂಬಳೆ ಮಾತನಾಡಿ, ಪಟ್ಟಣಕ್ಕೆ ಕೊವಿಡ್ ವಕ್ಕರಿಲು ಬರದಂತೆ ನಿಯಂತ್ರಣ ಮಾಡುವುದಕ್ಕೆ ಸಾರ್ವಜನಿಕರ ಸಹಕಾರ ಬೇಕಾಗಿದೆ. ಪರಿಸ್ಥಿತಿ ಗಂಭೀರ ಹಂತ ತಲುಪುವ ಮೊದಲೇ ಸಾರ್ವಜನಿಕರು ಎಚ್ಚರಿಕೆ ವಹಿಸುವ ಮೂಲಕ ಸೋಂಕು ಹರಡದಂತೆ ತಡೆಗಟ್ಟಬೇಕಿದೆ. ವ್ಯಾಪಾರಸ್ಥರಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳ ದವರಿಗೆ ಮತ್ತು ಮಾಸ್ಕ್ ಧರಸದೆ ಇದ್ದವರಿಗೆ ದಂಡ ವಸೂಲಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಅವರು, ಸರ್ಕಾರ ಇತ್ತೀಚಿಗೆ ಹೊರಡಿಸಿದ ಕೋವಿಡ್-19ರ ನಿಯಮಗಳನ್ನು ಪಾಲಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಂಡು ಸಹಕಾರ ನೀಡುವಂತೆ ಕೋರಿದರು.
ಸಭೆಯಲ್ಲಿ ಪಟ್ಟಣ ಪಂಚಾಯತಿ ಎಲ್ಲಾ ಸಿಬ್ಬಂದಿ ವರ್ಗದವರು ಮತ್ತು ವ್ಯಾಪಾರಸ್ಥರು ಉಪಸ್ಥಿತರಿದ್ದರು.