ಹಾವೇರಿ ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಉಚಿತ ಶೌಚಾಲಯಕ್ಕೆ ಡಿವೈಎಫ್ಐ ಆಗ್ರಹ
ಹಾವೇರಿ 17: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಉಚಿತ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಶೌಚಾಲಯ ಬಳಕೆಯ ಹೆಸರಿನಲ್ಲಿ ನಡೆಯುತ್ತಿರುವ ಅತಿಯಾದ ಹಣ ವಸೂಲಿಯನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನರ ಫೆಡರೇಶನ್ (ಡಿವೈಎಫ್ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ನಿಯಂತ್ರಣಾಧಿಕಾರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಹಾವೇರಿ ಜಿಲ್ಲೆಯ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಸಾವಿರಾರು ಪ್ರಯಾಣಿಕರು, ವಿದ್ಯಾರ್ಥಿ-ಯುವಜನರು ಆಗಮಿಸುತ್ತಾರೆ. ಅದರಲ್ಲೂ ಮಹಿಳೆಯರು, ವಿದ್ಯಾರ್ಥಿನಿಯರು, ವಯೋವೃದ್ಧರು ಸೇರಿದಂತೆ ಅನೇಕರು ಬಸ್ಗಳಿಗಾಗಿ ಕಾಯುತ್ತಿರುತ್ತಾರೆ. ಆದರೆ ಬಸ್ ನಿಲ್ದಾಣದಲ್ಲಿರುವ ಶೌಚಾಲಯಗಳನ್ನು ಬಳಸಲು ಮಹಿಳೆಯರಿಂದಲೂ ಹಣ ವಸೂಲಿ ಮಾಡುತ್ತಿರುವುದು ಅತ್ಯಂತ ಖಂಡನೀಯ ಸಂಗತಿಯಾಗಿದೆ.
ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಕನಿಷ್ಠ ಮೂಲಭೂತ ಸೌಕರ್ಯವಾದ ಶೌಚಾಲಯ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸುವುದು ಸಾರಿಗೆ ಇಲಾಖೆಯ ಜವಾಬ್ದಾರಿಯಾಗಿದೆ. ಆದರೆ ಶೌಚಾಲಯ ಬಳಕೆಯ ಹೆಸರಿನಲ್ಲಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿರುವುದು ಜನಸಾಮಾನ್ಯರಿಗೆ ಹೊರೆಯಾಗುತ್ತಿದೆ. ಇದು ಸಾರ್ವಜನಿಕರ ಅಗತ್ಯವನ್ನು ದುರುಪಯೋಗಪಡಿಸಿಕೊಂಡು ಹಗಲು ಹೊತ್ತಿನಲ್ಲೇ ಲೂಟಿ ಮಾಡುವ ರೀತಿಯಾಗಿದೆ.
ವಿಶೇಷವಾಗಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಅನಿವಾರ್ಯವಾಗಿ ಶೌಚಾಲಯ ಬಳಸಬೇಕಾದ ಪರಿಸ್ಥಿತಿಯಲ್ಲಿ ಹಣ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ. ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ಇಂತಹ ಸಮಸ್ಯೆಗಳು ಮುಂದುವರಿಯುವುದು ಸರಿಯಲ್ಲ. ಆದ್ದರಿಂದ ತಾವು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ,
ಕೂಡಲೇ ಸೂಕ್ತ ಕ್ರಮ ಕೈಗೊಂಡು ಮಹಿಳೆಯರಿಗೆ ಉಚಿತ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕೆಂದು ಎಸ್ಎಫ್ಐ ಮತ್ತು ಡಿವೈಎಫ್ಐ ಹಾವೇರಿ ಜಿಲ್ಲಾ ಸಮಿತಿಗಳ ಪರವಾಗಿ ಆಗ್ರಹಿಸುತ್ತೇವೆ. ಇಲ್ಲವಾದಲ್ಲಿ ಮಹಿಳೆಯರ ಹಕ್ಕುಗಳಿಗಾಗಿ ಸಾರ್ವಜನಿಕರನ್ನು ಒಗ್ಗೂಡಿಸಿ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಚ್ಚರಿಕೆ ನೀಡಿದರು.