ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ಬ್ಯಾಡಗಿ 12: ಹಿಂದುಳಿದ ವರ್ಗಗಳ ನಾಯಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಅ.20 ರಂದು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ತಹಶೀಲ್ದಾರರ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
ಗುರುವಾರ ಸ್ಥಳೀಯ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ನಡೆದ ಡಿ.ದೇವರಾಜ ಅರಸು ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ ಎಸ್.ಎ.ಪ್ರಸಾದ ವಹಿಸಿ ಮಾತನಾಡಿ, ಹಿಂದುಳಿದ ವರ್ಗದವರ ಕಲ್ಯಾಣಾಭಿವೃದ್ಧಿಗೆ ದೇವರಾಜ ಅರಸು ಅವರ ಕೊಡುಗೆ ಅಪಾರವಾದುದು. ಅವರು ಅನುಷ್ಠಾನಗೊಳಿಸಿದ ಯೋಜನೆಗಳಿಂದ ಆ ವರ್ಗದಜನರಿಗೆ ಹೆಚ್ಚಿನ ಅನುಕೂಲವಾಗಿದೆ ಎಂದರು. ಸಭೆಯಲ್ಲಿ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸಿ.ಬಿ.ಪ್ರಸಾದಿಮಠ ಮಾತನಾಡಿ ಅ.20 ರಂದು ಬೆಳಿಗ್ಗೆ 10-30 ಗಂಟೆಗೆ ತಾಲೂಕಿನ ಶಾಸಕರಾದ ಬಸವರಾಜ ಶಿವಣ್ಣನವರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಭೆಯಲ್ಲಿ ವಿವಿಧ ಗಣ್ಯರು ಭಾಗವಹಿಸಲಿದ್ದು ಹೆಚ್ಚಿನ ಜನತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತಿಳಿಸಿದರು.
ಸಭೆಯಲ್ಲಿ ಸಮಾಜ ಸೇವಕ ಜಿತೇಂದ್ರ ಸುಣಗಾರ, ಸಹಾಯಕ ಆರೋಗ್ಯಾಧಿಕಾರಿ ಡಾ.ಪ್ರಶಾಂತ, ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ್ ಹೊಳಿಯಪ್ಪಗೋಳ, ಸಮಾಜ ಕಲ್ಯಾಣಾಧಿಕಾರಿ ಜಿ. ದೊಡ್ಡಸಬಸಣವರ, ಶಿಶು ಅಭಿವೃದ್ಧಿ ಅಧಿಕಾರಿ ವೈ.ಟಿ.ಪೂಜಾರ ಸೇರಿದಂತೆ ಇತರರಿದ್ದರು.