ಕಬ್ಬಿಗೆ ಸೂಕ್ತ ಬೆಲೆ ನಿಗದಿ, ರೈತ ಮುಖಂಡರ ಬಿಡುಗಡೆಗೆ ಆಗ್ರಹ
ಕೊಲ್ಹಾರ 05 : ಕಬ್ಬಿನ ದರ ನಿಗದಿ ಹೋರಾಟದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಹಾಗೂ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಸೇರಿದಂತೆ ಹಲವು ರೈತರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ರೈತರು ಆಕ್ರೋಶ ವ್ಯಕ್ತಪಡಿಸಿದರು. ಕೊಲ್ಹಾರ ಯುಕೆಪಿ ಕ್ರಾಸ್ ಸಮೀಪದ ಕೊರೆಮ್ಮಾದೇವಿ ಗುಡಿ ಬಳಿ ಗುರುವಾರ ರೈತರು ರಾಷ್ಟ್ರೀಯ ಹೆದ್ದಾರಿ-52 ತಡೆದು ಪ್ರತಿಭಟನೆ ನಡೆಸಿದರು.
ಕಬ್ಬಿಗೆ ಸೂಕ್ತ ದರ ನಿಗದಿ ಮಾಡಬೇಕು, ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಹಾಗೂ ವಶಕ್ಕೆ ಪಡೆದಿರುವ ರೈತ ನಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ವಾಹನ ಸಂಚಾರ ಅಸ್ತವ್ಯಸ್ತ ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರಿಂದ ರಾಷ್ಟ್ರೀಯ ಹೆದ್ದಾರಿ-52 ರಲ್ಲಿ ವಾಹನ ಸಂಚಾರ ಕೆಲಕಾಲ ಸಂಪೂರ್ಣ ಅಸ್ತವ್ಯಸ್ತಗೊಂಡಿತು. '
ಹೆದ್ದಾರಿಯ ಎರಡೂ ಬದಿಗಳಲ್ಲಿ ವಾಹನಗಳ ಸಾಲು ಕಂಡುಬಂದಿತು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ ಕೊಲ್ಹಾರ ಪೊಲೀಸ್ ಠಾಣೆಯ ಪಿಎಸ್ಐ ಅಶೋಕ ನಾಯಕ ಹಾಗೂ ಸಿಬ್ಬಂದಿ ಸ್ಥಳದಲ್ಲಿದ್ದು, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು.