ಕೋವಿಡ್ನಿಂದ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಆಗ್ರಹ
ಮುಂಡಗೋಡ 01: ಪೆಟ್ರೋಲ್ ಹಾಗೂ ಡಿಸೆಲ್ ಬೆಲೆ ಏರಿಕೆ ಖಂಡಿಸಿ ಹಾಗೂ ಕೊರೋನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಮತ್ತು ಕೊರೋನಾದಿಂದ ಮೃತಪಟ್ಟರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಒದಗಿಸುವಂತೆ ಆಗ್ರಹಿಸಿ ಜೆಡಿಎಸ್ ನವರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು.
ಇಲ್ಲಿಯ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳ ಮೂಲಕ ಸಂಚರಿಸಿತು. ರೈತರು ಹಾಗೂ ಬಡವರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದ ಲಜ್ಜೆಗೆಟ್ಟ ಸರ್ಕಾರ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಮಿನಿವಿಧಾನಸೌದಕ್ಕೆ ತೆರಳಿ ಗ್ರೇಡ್ 2 ತಹಸೀಲ್ದಾರ ಜಿ.ಬಿ ಭಟ್ ಅವರಿಗೆ ಮನವಿ ಸಲ್ಲಿಸಿದರು.
ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಮುನಾಫ್ ಮಿರ್ಜಾನಕರ, ತುಕಾರಾಮ ಗುಡಕರ, ಬಶೀರ ಗುರನಳ್ಳಿ, ಸುಧಾಕರ ನಾಯ್ಕ, ನಾಗರಾಜ ತಳವಾರ ಮುಂತಾದವರು ಉಪಸ್ಥಿತರಿದ್ದರು.