ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಘೋಷಿಸಲು ಆಗ್ರಹ
ಲೋಕದರ್ಶನ ವರದಿ
ವಿಜಯಪುರ, ಸೆ. 23: ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆಯೆಂದು ಘೋಷಿಸುವುದು ಸೇರಿದಂತೆ ರೈತರ ಸಂಪೂರ್ಣ ಸಾಲಮನ್ನಾಕ್ಕೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಧರಣಿ ಸತ್ಯಾಗ್ರಹ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿತು.
ಈ ಸಂದರ್ಭದಲ್ಲಿ ಮಾತನಾಡಿದ ಎ.ಎಸ್. ಪಾಟೀಲ ನಡಹಳ್ಳಿ, ರಾಜ್ಯ ಸರ್ಕಾರ ದಿನಕ್ಕೊಂದು ತಾಲೂಕನ್ನು ಬರಪೀಡಿತ ಎಂದು ಘೋಷಿಸುವ ಮೂಲಕ ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು. ಇಡೀ ವಿಜಯಪುರ ಜಿಲ್ಲೆಯನ್ನು ಒಂದೇ ಬಾರಿಗೆ ಬರಪೀಡಿತ ಎಂದು ಘೋಷಿಸುವ ಸಾಧ್ಯತೆ ಇದ್ದರೂ ಸರ್ಕಾರ ಈ ರೀತಿಯ ನೀತಿ ಅನುಸರಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.
ಬರದ ಪರಿಸ್ಥಿತಿಯಲ್ಲಿ ಸರ್ಕಾರ ನೀರೀಕ್ಷಿತ ಮಟ್ಟದಲ್ಲಿ ಕಾಳಜಿ ವಹಿಸುತ್ತಿಲ್ಲ. ರೈತರ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿರುವುದು ರೈತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ರೈತರ ಅಸಮಾಧಾನ ಮತ್ತಷ್ಟು ಹೆಚ್ಚಲಿದೆ ಎಂದು ಹೇಳಿದರು.
ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ರೈತರ ಸಂಕಷ್ಟವನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು. ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆಯೇ ಎಂಬ ಪ್ರಶ್ನೆ ಮೂಡುತ್ತಿದೆ. ಕನಿಷ್ಠ ಮಾನವೀಯತೆ ಮತ್ತು ಕರುಣೆಯೊಂದಿಗೆ ಸರ್ಕಾರ ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.
ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ರೈತ ಸಮುದಾಯ ಸಂಕಷ್ಟದಲ್ಲಿದ್ದು, ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು. ಬರ ಘೋಷಣೆಯನ್ನು ಸೀಮಿತ ತಾಲೂಕುಗಳಿಗೆ ಮಾತ್ರ ಅನ್ವಯಿಸದೆ, ಅಗತ್ಯವಿರುವ ಎಲ್ಲ ಪ್ರದೇಶಗಳನ್ನು ಒಳಪಡಿಸಬೇಕು. ರೈತರ ಸಾಲವನ್ನು ಯಾವುದೇ ಷರತ್ತಿಲ್ಲದೆ ಮನ್ನಾ ಮಾಡಬೇಕು. ಸಾಲ ವಸೂಲಾತಿಯನ್ನು ಬಲವಂತವಾಗಿ ನಡೆಸದಂತೆ ಕ್ರಮ ಕೈಗೊಂಡು, ತಕ್ಷಣ ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಮಾತನಾಡಿ, ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆಯೆಂದು ಘೋಷಿಸಬೇಕು ಎಂದು ಆಗ್ರಹಿಸಿದರು. ರೈತರೊಂದಿಗೆ ನಿಲ್ಲಬೇಕಾದ ಜಿಲ್ಲೆಯ ಕೆಲವು ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಮೌನ ವಹಿಸಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರಮೇಶ ಭೂಸನೂರ, ಸೋಮನಗೌಡ ಪಾಟೀಲ ಸಾಸನೂರ, ವಿಜುಗೌಡ ಪಾಟೀಲ, ಸಂಜಯ ಐಹೊಳೆ, ಕಾಸುಗೌಡ ಬಿರಾದಾರ ಸೇರಿದಂತೆ ಹಲವು ಮುಖಂಡರು ಮಾತನಾಡಿ, ಬರಪೀಡಿತ ರೈತರಿಗೆ ತಕ್ಷಣ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಕೆ. ಆನಂದ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು. ಧರಣಿಯಲ್ಲಿ ವಿವಿಧ ಬಿಜೆಪಿ ಮುಖಂಡರು, ಮಾಜಿ ಜನಪ್ರತಿನಿಧಿಗಳು, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.