ವಿನಯ್ ಕುಲಕರ್ಣಿಗೆ ಸಚಿವ ಸ್ಥಾನ ನೀಡಲು ಆಗ್ರಹ
ಲೋಕದರ್ಶನ ವರದಿ
ಮಹಾಲಿಂಗಪುರ 1: ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ಪಂಚಮಸಾಲಿ ಸಮಾಜದ ಆಶಯ ಈಡೇರಿಸಲು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡಬೇಕು ಎಂದು ಬಾಗಲಕೋಟೆ ಜಿಲ್ಲಾ ಪಂಚಮಸಾಲಿ ಸಮಾಜದ ಅಧ್ಯಕ್ಷ ಧರೆಪ್ಪ ಸಾಂಗ್ಲಿಕರ್ ಒತ್ತಾಯಿಸಿದರು. ನಗರದ ಶರಣ ಆಸ್ಪತ್ರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಅವರು ಜನಪರ ಕಾಳಜಿಯುಳ್ಳ ನಾಯಕರು. ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು. ಉತ್ತರ ಕರ್ನಾಟಕದ ಜನರ ಧ್ವನಿಯಾಗಿರುವ ಕುಲಕರ್ಣಿ ಅವರಿಗೆ ಸಚಿವ ಸ್ಥಾನ ನೀಡಿದರೆ ಈ ಭಾಗದ ಅಭಿವೃದ್ಧಿ ಕಾರ್ಯಗಳಿಗೆ ವೇಗ ದೊರೆಯಲಿದೆ.
ಅವರ ಆಡಳಿತ ಅನುಭವ ಮತ್ತು ಸಂಘಟನಾ ಸಾಮರ್ಥ್ಯವನ್ನು ರಾಜ್ಯದ ಹಿತಕ್ಕಾಗಿ ಬಳಸಿಕೊಳ್ಳಬೇಕು ಎಂದು ಆಗ್ರಹಿಸಿದರು. ಪಂಚಮಸಾಲಿ ಸಮಾಜವು ರಾಜ್ಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದು, ಸಮಾಜದ ಭಾವನೆಗಳಿಗೆ ಸರ್ಕಾರ ಸ್ಪಂದಿಸಬೇಕು. ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಮುಂದಿನ ಸಂಪುಟ ವಿಸ್ತರಣೆಯಲ್ಲಿ ವಿನಯ್ ಕುಲಕರ್ಣಿ ಅವರಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಹಾದೇವ ಮಾರಾಪುರ, ಹಣಮಂತ ಶಿರೋಳ, ವಿನೋದ್ ಉಳ್ಳಾಗಡ್ಡಿ, ವೀರೇಶ ಆಸಂಗಿ ಸೇರಿದಂತೆ ಸಮಾಜದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.