ಇಂಡಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಒತ್ತಾಯ
ಇಂಡಿ, 24: ವಿಜಯಪುರ ಜಿಲ್ಲೆಯ ಇಂಡಿ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರೆ್ಡ ಮಾಡಬೇಕು ಎಂದು ಒತ್ತಾಯಿಸಿ ರೈತರು ಹಾಗೂ ವಿವಿಧ ಸಂಘಟನೆಗಳು ಹಲವು ಬಾರಿ ಹೋರಾಟ ನಡೆಸಿದ್ದರೂ, ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಇಂಡಿ ತಾಲೂಕು ಸೇರೆ್ಡಯಾಗದಿರುವುದು ದುರದೃಷ್ಟಕರ ಎಂದು ಬಿ.ಡಿ. ಪಾಟೀಲ ಆರೋಪಿಸಿದರು.
ಸ್ಥಳೀಯ ಶಾಸಕ ಯಶವಂತರಾಯಗೌಡ ಪಾಟೀಲ ಅವರು ರೈತರ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆದು, ಇಂಡಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಪರಿಣಾಮಕಾರಿ ಪ್ರಯತ್ನ ಮಾಡಬೇಕಿತ್ತು. ಆದರೆ ಇದೀಗ ರಾಜೀನಾಮೆ ನೀಡುವ ಮಾತುಗಳ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.
“ರಾಜೀನಾಮೆ ದೊಡ್ಡದಲ್ಲ, ರೈತರ ಬದುಕು ದೊಡ್ಡದು. ಸದ್ಯ ರಾಜೀನಾಮೆ ಸಲ್ಲಿಸುವ ಪರಿಸ್ಥಿತಿ ಇಲ್ಲ. ಏನಾದರೂ ಇದ್ದರೂ ರೈತರು ತಮ್ಮ ಬದುಕನ್ನೇ ಕಳೆದುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ,” ಎಂದು ಬಿ.ಡಿ. ಪಾಟೀಲ ಹೇಳಿದರು.
ಸರ್ಕಾರ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಈ ಗಂಭೀರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ತಕ್ಷಣ ರೈತರ ನೆರವಿಗೆ ಧಾವಿಸಬೇಕು ಎಂದು ಅವರು ಆಗ್ರಹಿಸಿದರು. ರೈತರಿಗೆ ಬರ ಪರಿಹಾರ, ಬೆಳೆ ನಷ್ಟ ಪರಿಹಾರ, ಬೆಳೆ ವಿಮೆ ಹಾಗೂ ಅಗತ್ಯ ನೆರವು ಒದಗಿಸಬೇಕು. ರೈತರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಸರ್ಕಾರ ಯಾವುದೇ ವಿಳಂಬ ಮಾಡಬಾರದು ಎಂದು ಬಿ.ಡಿ. ಪಾಟೀಲ ಒತ್ತಾಯಿಸಿದರು.