ಯುವ ಸಂಸತ್ತಿನಲ್ಲಿ ಸಂಸದೀಯ ಕಲಾಪದ ಮಾದರಿ ಪ್ರದರ್ಶನ
ಲೋಕದರ್ಶನ ವರದಿ
ವಿಜಯಪುರ 9 : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮಹತ್ವ, ಸಂವಿಧಾನದ ಆಶಯಗಳು ಹಾಗೂ ಸಂಸದೀಯ ವ್ಯವಸ್ಥೆಯ ಕಾರ್ಯವೈಖರಿಯನ್ನು ಅರಿತುಕೊಂಡು ಜವಾಬ್ದಾರಿಯುತ ನಾಗರಿಕರಾಗಿ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಭವನದಲ್ಲಿ ಗುರುವಾರ ಆಯೋಜಿಸಿದ್ದ ವಿಜಯಪುರ ತಾಲೂಕು ಮಟ್ಟದ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ನಾಯಕತ್ವದ ಗುಣಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚಿಸುವ ಮನೋಭಾವ ಬೆಳೆಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದರು.
ಯುವ ಸಂಸತ್ತಿನಲ್ಲಿ ವಿದ್ಯಾರ್ಥಿಗಳು ನಡೆಸಿದ ಚರ್ಚೆ, ಪ್ರಶ್ನೋತ್ತರ ಹಾಗೂ ಸಂಸದೀಯ ಕಲಾಪದ ಪ್ರಸ್ತುತಿಯನ್ನು ಗಮನಿಸಿದಾಗ, ಇದು ಕೇವಲ ಅಣಕು ಸಂಸತ್ತಿನಂತೆ ಕಾಣದೆ ನೈಜ ಸಂಸತ್ತಿನ ಕಲಾಪವೇ ನಡೆಯುತ್ತಿರುವ ಅನುಭವವಾಯಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಸಂವಿಧಾನ ನೀಡಿರುವ ಹಕ್ಕುಗಳ ಜೊತೆಗೆ ತಮ್ಮ ಕರ್ತವ್ಯಗಳನ್ನೂ ಅರಿತುಕೊಳ್ಳಬೇಕು. ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಪರಸ್ಪರ ಗೌರವದಂತಹ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಯುವ ಸಂಸತ್ತಿನಲ್ಲಿ ವಿವಿಧ ಕಾಲೇಜುಗಳ 195 ವಿದ್ಯಾರ್ಥಿಗಳು ಭಾಗವಹಿಸಿ, ಸಂಸದೀಯ ಕಲಾಪದ ಮಾದರಿಯನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ವಿಜಯಪುರ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತ ಬೆಳ್ಳುಂಡಗಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿರಾದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ ಹೊಸೂರ, ಸಹಾಯಕ ನಿರ್ದೇಶಕ ಬಿ.ಜೆ. ಇಂಡಿ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಯೋತಿ, ನವಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಶಿವಾನಂದ ಜಮಾದಾರ, ಪದವಿಪೂರ್ವ ಕಾಲೇಜಿನ ರಜಪೂತ್ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯಗಳ ನಿಲಯಪಾಲಕರು, ಸಿಬ್ಬಂದಿ, ಶಿಕ್ಷಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಶಿವಾನಂದ ಜಮಾದಾರ ವಂದಿಸಿದರು.