ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಠಿಣ ಕ್ರಮಕ್ಕೆ ಆಗ್ರಹ

ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಠಿಣ ಕ್ರಮಕ್ಕೆ ಆಗ್ರಹ  Derogatory remarks against Ambedkar: Demand for strict action


ಕೊಪ್ಪಳ, ಸೆ. 07: ಸಾಮಾಜಿಕ ಕ್ರಾಂತಿಯ ಹರಿಕಾರ ಜಗಜ್ಯೋತಿ ಬಸವಣ್ಣ, ಅಹಿಂಸೆಯ ಹರಿಕಾರ ಭಗವಾನ್ ಗೌತಮ ಬುದ್ಧ, ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್ ಹಾಗೂ ದಲಿತ ಸಮುದಾಯದ ವಿರುದ್ಧ ಸಾರ್ವಜನಿಕವಾಗಿ ಅತ್ಯಂತ ಕೀಳುಮಟ್ಟದ ಪದಗಳನ್ನು ಬಳಸಿ ನಿಂದಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ ಪ್ರಚೋದನೆಗೆ ಯತ್ನಿಸಿದ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು, ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಸೋಮವಾರ ಕೊಪ್ಪಳ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.  

ಜನಪರ, ಪ್ರಗತಿಪರ, ದಲಿತಪರ ಹಾಗೂ ಕಾನೂನು ವಿದ್ಯಾರ್ಥಿಗಳ ಸಂಘಟನೆಗಳ ನೇತೃತ್ವದಲ್ಲಿ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಉಪ ತಹಶೀಲ್ದಾರ್ ಜಿ. ಸತೀಶ್ ಅವರ ಮೂಲಕ ಮನವಿ ಸಲ್ಲಿಸಲಾಯಿತು.  

ಸಾಮಾಜಿಕ ಜಾಲತಾಣದ ವಿಡಿಯೋ ಆಧರಿಸಿ ಆರೋಪ  

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಆಧರಿಸಿ, ಮಂಡ್ಯ ಜಿಲ್ಲೆಯ ಕೆ.ಆರ್‌. ಪೇಟೆ ತಾಲೂಕಿನ ದೊಡ್ಡಯಾಚೇನಹಳ್ಳಿ ಗ್ರಾಮದ ‘ವೇದಮೂರ್ತಿ’ ಎಂಬ ವ್ಯಕ್ತಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.  

ಸಂವಿಧಾನವು ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ದೇಶದ ನಿರ್ಮಾತೃಗಳು ಹಾಗೂ ನಿರ್ದಿಷ್ಟ ಸಮುದಾಯವನ್ನು ವಿಕೃತ ಮತ್ತು ಅವಾಚ್ಯ ಪದಗಳಿಂದ ನಿಂದಿಸಿ, ಸಮಾಜದ ಶಾಂತಿ, ಸೌಹಾರ್ದತೆ ಹಾಗೂ ಭಾವೈಕ್ಯತೆಗೆ ಧಕ್ಕೆ ತರುವ ಕೃತ್ಯವನ್ನು ನಾಗರಿಕ ಸಮಾಜ ಸಹಿಸುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.  

ಪ್ರಮುಖ ಬೇಡಿಕೆಗಳು  

ಆರೋಪಿಯ ವಿರುದ್ಧ ತಕ್ಷಣವೇ ರೌಡಿ ಶೀಟರ್ ಪ್ರಕರಣ ದಾಖಲಿಸಿ, ರಾಜ್ಯದ ಹಿತದೃಷ್ಟಿಯಿಂದ ಗಡಿಪಾರು ಮಾಡಬೇಕು.  ಭಾರತೀಯ ನ್ಯಾಯ ಸಂಹಿತೆ (ಃಓಖ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ (ಖಅ/ಖಖಿ ಕಠ ಂಛಿಣ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಸೂಕ್ತ ಜಾಮೀನು ರಹಿತ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು.  

ಮುಂದಿನ ದಿನಗಳಲ್ಲಿ ಯಾವುದೇ ರಾಷ್ಟ್ರೀಯ ನಾಯಕರನ್ನು ಅಥವಾ ಯಾವುದೇ ಸಮುದಾಯವನ್ನು ಹಗುರವಾಗಿ ಕಾಣದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.  ಸಾಮಾಜಿಕ ಶಾಂತಿ, ಸೌಹಾರ್ದತೆ ಮತ್ತು ಸಾಮಾಜಿಕ ನ್ಯಾಯದ ಹಿತದೃಷ್ಟಿಯಿಂದ ಗೃಹ ಹಾಗೂ ಪೊಲೀಸ್ ಇಲಾಖೆ ತಕ್ಷಣ ಸ್ಪಂದಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು.  

ಪ್ರತಿಭಟನಾಕಾರರು ಮಾತನಾಡಿ, “ನಾಗರಿಕ ಸಮಾಜದ ಶಾಂತಿ, ಸೌಹಾರ್ದತೆ ಹಾಗೂ ಸಾಮಾಜಿಕ ನ್ಯಾಯದ ಹಿತದೃಷ್ಟಿಯಿಂದ ಗೃಹ ಇಲಾಖೆ ಮತ್ತು ಪೊಲೀಸ್ ಇಲಾಖೆ ಕೂಡಲೇ ಸ್ಪಂದಿಸಬೇಕು. ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ರಾಜ್ಯದಿಂದ ಗಡಿಪಾರು ಮಾಡಬೇಕು. ಇಲ್ಲವಾದಲ್ಲಿ ಸಂವಿಧಾನಾತ್ಮಕ ಹಾಗೂ ಪ್ರಜಾಸತ್ತಾತ್ಮಕ ಮಾರ್ಗದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ರೂಪಿಸಲಾಗುವುದು” ಎಂದು ಎಚ್ಚರಿಸಿದರು.  

ಪ್ರತಿಭಟನೆ ವೇಳೆ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್‌.ಎ. ಗಫಾರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಮುಖ್ಯ ಸಂಚಾಲಕ ಬಸವರಾಜ ಶೀಲವಂತರ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿ ಜಿಲ್ಲಾ ಅಧ್ಯಕ್ಷ ನಿಂಗಪ್ಪ ಜಿ.ಎಸ್‌. ಬೆಣಕಲ್, ಕಾನೂನು ವಿದ್ಯಾರ್ಥಿಗಳ ಸಂಘಟನೆಯ ಸಂಚಾಲಕ ಹನುಮೇಶ್ ಛಲವಾದಿ, ಆಸಿಫ್, ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಅಧ್ಯಕ್ಷ ಮುದಕಪ್ಪ ಹೊಸಮನಿ, ದಲಿತ ಯುವ ವೇದಿಕೆ ಸಂಚಾಲಕ ಸುಂಕಪ್ಪ ಮೀಸಿ ಸೇರಿದಂತೆ ಹಲವು ಮುಖಂಡರು, ಚಿಂತಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.