ದೇವರಾಜ ಅರಸು ಸಾಮಾಜಿಕ ಸಮಾನತೆಗೆ ಶ್ರಮಿಸಿದ ನಾಯಕ

ದೇವರಾಜ ಅರಸು ಸಾಮಾಜಿಕ ಸಮಾನತೆಗೆ ಶ್ರಮಿಸಿದ ನಾಯಕ  Devaraj Urs was a leader who strove for social equality


ಅಥಣಿ 20: ಜನಪರ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ರಾಜ್ಯ ಕಂಡ ಅಚ್ಚುಮೆಚ್ಚಿನ ನಾಯಕರಾಗಿದ್ದರು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿದ್ಧಾರ್ಥ ಸಿಂಗ್ ಹೇಳಿದರು.  

ಪಟ್ಟಣದ ಖೋತ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ದೇವರಾಜ ಅರಸು ಅವರ 111ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.  

ದೇವರಾಜ ಅರಸು ಅವರು ಭೂ ಸುಧಾರಣಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಭೂ ರಹಿತರಿಗೆ ಭೂಮಿ ದೊರೆಯುವಂತೆ ಮಾಡಿದರು. ಸಾಮಾಜಿಕ ಹಾಗೂ ಆರ್ಥಿಕ ಸಮಾನತೆಗಾಗಿ ಅವರು ಸಾಕಷ್ಟು ಶ್ರಮಿಸಿದ್ದರು ಎಂದು ಹೇಳಿದರು.  

ಉಪನ್ಯಾಸ ನೀಡಿದ ಸಿದ್ದರಾಮ ಕಾಂಬಳೆ, ದೇವರಾಜ ಅರಸು ಅವರು ಹಿಂದುಳಿದ ವರ್ಗದಲ್ಲಿ ಜನಿಸಿ, ಸಾಮಾಜಿಕ ಅಸಮಾನತೆ ವಿರುದ್ಧ ಹೋರಾಟದ ಮೂಲಕ ರಾಜಕೀಯ ಪ್ರವೇಶಿಸಿ ಶಾಸಕರಾಗಿ, ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಯಶಸ್ವಿ ಆಡಳಿತ ನೀಡಿದರು ಎಂದರು.  

ಕಾರ್ಯಕ್ರಮದಲ್ಲಿ ಪುರಸಭೆ ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ, ದೇವರಾಜ ಅರಸು ಜನ್ಮದಿನಾಚರಣೆ ಸಮಿತಿ ಅಧ್ಯಕ್ಷ ಹಾಗೂ ತಹಶೀಲ್ದಾರ್ ಸಿದ್ದರಾಯ ಭೋಸಗಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಯಾಣಪುರ, ಕೃಷಿ ಅಧಿಕಾರಿ ನಿಂಗಣ್ಣ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.  ಕಾರ್ಯಕ್ರಮದಲ್ಲಿ ವಸತಿ ನಿಲಯಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವೆಂಕಟೇಶ ಕುಲಕರ್ಣಿ ಸ್ವಾಗತಿಸಿದರು. ಅಶೋಕ ಸತಿಗೌಡರ ವಂದಿಸಿದರು.