ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 4.07 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಬೆಳಗಾವಿ 04: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ, ಬಾಳೇಕುಂದ್ರಿ ಕೆ.ಎಚ್. ಹೊನ್ನಿಹಾಳ, ಬಾಳೇಕುಂದ್ರಿ ಬಿ.ಕೆ. ಹಾಗೂ ಸುಳಗಾ ಯಳ್ಳೂರು ಗ್ರಾಮಗಳಲ್ಲಿ ಒಟ್ಟು 4.07 ಕೋಟಿ ವೆಚ್ಚದ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಲಾಯಿತು. ಮಾಜಿ ಸಚಿವೆ ಹಾಗೂ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ವಿವಿಧ ಗ್ರಾಮಗಳಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಮುತಗಾದಲ್ಲಿ 90 ಲಕ್ಷ, ಬಾಳೇಕುಂದ್ರಿ ಕೆ.ಎಚ್. ನಲ್ಲಿ 75 ಲಕ್ಷ, ಹೊನ್ನಿಹಾಳದಲ್ಲಿ 46 ಲಕ್ಷ ಹಾಗೂ ಬಾಳೇಕುಂದ್ರಿ ಬಿ.ಕೆ.ಯಲ್ಲಿ 96 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸುಳಗಾ ಯಳ್ಳೂರಿನಲ್ಲಿ ಸುಮಾರು 1 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಚಾಲನೆ ನೀಡಿದರು. ಈ ಕಾಮಗಾರಿಗಳಿಂದ ಗ್ರಾಮಗಳ ಆಂತರಿಕ ರಸ್ತೆ ಸಂಪರ್ಕ ಸುಧಾರಿಸುವುದರ ಜೊತೆಗೆ ಮಳೆ ನೀರು ಸರಾಗವಾಗಿ ಹರಿದುಹೋಗಲು ಹಾಗೂ ನೈರ್ಮಲ್ಯ ವ್ಯವಸ್ಥೆ ಬಲಪಡಿಸಲು ಅನುಕೂಲವಾಗಲಿದೆ. ಮುತಗಾ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್, ಮಕ್ಕಳ ಆರೋಗ್ಯ, ಪೌಷ್ಟಿಕಾಂಶ ಹಾಗೂ ಕೇಂದ್ರದ ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದರು. ಬಳಿಕ ಮಾರಿಹಾಳ ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, ಮುಂದಿನ ವರ್ಷ ನಡೆಯಲಿರುವ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಅಗತ್ಯ ಮೂಲಸೌಕರ್ಯ ಹಾಗೂ ಭಕ್ತರಿಗೆ ಸೌಲಭ್ಯ ಕಲ್ಪಿಸುವ ಕುರಿತು ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, “ಸುಗಮ ಸಂಚಾರ, ಉತ್ತಮ ನೈರ್ಮಲ್ಯ ಹಾಗೂ ಪ್ರತಿಯೊಂದು ಗ್ರಾಮಕ್ಕೂ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ನಮ್ಮ ಉದ್ದೇಶ. ಯಾವುದೇ ಗ್ರಾಮ ಅಭಿವೃದ್ಧಿಯಿಂದ ವಂಚಿತವಾಗದಂತೆ ಹಂತ ಹಂತವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು,” ಎಂದರು. ಕಾರ್ಯಕ್ರಮಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.