ಪ್ರತಿ ಆರು ತಿಂಗಳಿಗೊಮ್ಮೆ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ

ಪ್ರತಿ ಆರು ತಿಂಗಳಿಗೊಮ್ಮೆ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ  Deworming tablets for children every six months


ಹೂವಿನಹಡಗಲಿ, 10: ತಾಲ್ಲೂಕಿನ 1ರಿಂದ 19 ವರ್ಷದೊಳಗಿನ ಪ್ರತಿಯೊಬ್ಬ ಮಗುವಿಗೂ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಅಲ್ಬೆಂಡಜೋಲ್ ಮಾತ್ರೆಯನ್ನು ಕಡ್ಡಾಯವಾಗಿ ನೀಡಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಹೇಳಿದರು.  

ಪಟ್ಟಣದ ಜಿಪಿಜಿ ಹೈಸ್ಕೂಲ್ನಲ್ಲಿ ಸೋಮವಾರ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಮಕ್ಕಳಿಗೆ ಮಾತ್ರೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  

ಜಂತುಹುಳು ನಿವಾರಣಾ ಮಾತ್ರೆ ಸಂಪೂರ್ಣ ಸುರಕ್ಷಿತವಾಗಿದ್ದು, ಸೇವನೆಯಿಂದ ಯಾವುದೇ ಅಡ್ಡಪರಿಣಾಮ ಉಂಟಾಗುವುದಿಲ್ಲ ಎಂದು ತಿಳಿಸಿದರು. ಜಂತುಹುಳಿನ ಸೋಂಕಿನಿಂದ ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ, ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯಲ್ಲಿ ಕುಂಠಿತತೆ ಉಂಟಾಗುವ ಸಾಧ್ಯತೆ ಇದೆ. ಇದರಿಂದ ಮಕ್ಕಳ ಕಲಿಕಾ ಸಾಮರ್ಥ್ಯದ ಮೇಲೂ ದುಷ್ಪರಿಣಾಮ ಬೀರಬಹುದು ಎಂದರು.  

ಆದ್ದರಿಂದ ಪ್ರತಿ ಆರು ತಿಂಗಳಿಗೊಮ್ಮೆ ಜಂತುಹುಳು ನಿವಾರಣಾ ಮಾತ್ರೆ ಸೇವಿಸುವುದು ಮಕ್ಕಳ ಆರೋಗ್ಯ ರಕ್ಷಣೆ ಹಾಗೂ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.  

ಡಾ. ಅನಿತಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ವರ, ಸಿಡಿಪಿಒ ರೇಣುಕಾ, ಶಿಕ್ಷಕಿ ಶ್ರೀಮತಿ ರಶೀದಾ, ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ. ರೂಪಶ್ರೀ ಹಿರೇಮಠ, ಆರೋಗ್ಯ ನೀರೀಕ್ಷಣಾಧಿಕಾರಿ ರಾಜೇಂದ್ರ ಗುಡೇಕೋಟೆ, ಜಿವಿ ಶಿವಕುಮಾರ್ ಹಾಗೂ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ರಾಧಾ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.  

ಆರೋಗ್ಯ ಸಿಬ್ಬಂದಿಗಳಾದ ದೀಪಿಕಾ, ಯಾಸ್ಮಿನ್, ಮಂಜುನಾಥ, ಮೇಘರಾಜ ಹಾಗೂ ಸಂಜೀವ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆರೋಗ್ಯ ಇಲಾಖೆಯ ಕ್ಷೇತ್ರ ಕಾರ್ಯಕರ್ತರು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.