ಕಲ್ಲಹಳ್ಳಿ ಗ್ರಾಮಸ್ಥರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಅನಿರುದ್ಧ್ ಪಿ.ಶ್ರವಣ್
ಹೊಸಪೇಟೆ (ವಿಜಯನಗರ) 22: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ನಿಮಿತ್ತ ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ ಅವರು ಹೊಸಪೇಟೆ ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಶುಕ್ರವಾರ ಗ್ರಾಮವಾಸ್ತವ್ಯ ನಡೆಸಿದರು.
ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ ಅವರು ಗ್ರಾಮದೆಲ್ಲೆಡೆ ಸಂಚರಿಸಿ ರಸ್ತೆಗಳು, ಚರಂಡಿ, ಸ್ವಚ್ಛತೆ ಹಾಗೂ ಇನ್ನೀತರ ಮೂಲಸೌಕರ್ಯ ವ್ಯವಸ್ಥೆಯನ್ನು ಖುದ್ದಾಗಿ ಪರೀಶೀಲಿಸಿದರು.
ಕಲ್ಲಹಳ್ಳಿಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ಅವರು, 3ನೇ ಅಂಗನವಾಡಿ ಕೇಂದ್ರದಲ್ಲಿ ಕೊಠಡಿ, ಅಡುಗೆ ಕೋಣೆ, ಶೌಚಾಲಯವನ್ನು ಪರೀಶೀಲಸಿದಾಗ ಎಲ್ಲಾವು ಉತ್ತಮ ಗುಣ ಮಟ್ಟದಲ್ಲಿ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಮಕ್ಕಳಿಂದ ಪದ್ಯಗಳನ್ನು ಕೇಳಿ ಜಿಲ್ಲಾಧಿಕಾರಿಗಳು ಖುಷಿ ಪಟ್ಟರು.
ಆರೋಗ್ಯ ಕ್ಷೇಮಕೇಂದ್ರಕ್ಕೆ ಅಗತ್ಯ ವೈದ್ಯರು ಮತ್ತು ಸಿಬ್ಬಂದಿ ಹಾಗೂ ಇನ್ನೀತರ ಸೌಕರ್ಯಗಳು ಹಾಗೂ ವಿದ್ಯುತ್ಚ್ಛಕ್ತಿ ಮತ್ತು ನೀರಿನ ವ್ಯವಸ್ಥೆಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಜನರಿಗೆ ಭರವಸೆ ನೀಡಿದರು.
ಈ ಗ್ರಾಮವಾಸ್ತವ್ಯ ನಡೆಸುವುದಕ್ಕಿಂತ ಕೆಲವು ದಿನಗಳ ಮುಂಚೆಯೇ ಗ್ರಾಮಕ್ಕೆ ತಹಸೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಕಳುಹಿಸಿ ಪಿಂಚಣಿ, ಪಹಣಿ, ದಾಖಲೆಗಳ ತಿದ್ದುಪಡಿ, ರೇಶನ್ ಕಾರ್ಡ್ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಬಗೆಹರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ ಅವರು ತಿಳಿಸಿದರು.
ಕಲ್ಲಹಳ್ಳಿ ಗ್ರಾಮಕ್ಕೆ ಎರಡು ಎಕರೆ, ಕಣವೆರಾಯನ ಗ್ರಾಮಕ್ಕೆ ಅರ್ಧ ಎಕರೆ ಜಾಗವನ್ನು ಸರ್ಕಾರಿ ಜಾಗವಾಗಲಿ ಅಥವಾ ಖಾಸಗಿ ಜಾಗವಾಗಲಿ ಖರೀದಿಸಿ ಸ್ಮಶಾನಕ್ಕೆ ನೀಡಲಾಗುವುದು ಎಂದು ಅವರು ಹೇಳಿದರು.
54 ಜನ ವೃದ್ಧರನ್ನು ವಯಸ್ಕರ ಪಿಂಚಣಿ ಯೋಜನೆಗೆ ಆಯ್ಕೆ ಮಾಡಲಾಗಿದ್ದು ಇದರಲ್ಲಿ 26 ಜನ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಪಿಂಚಣಿ ಪ್ರಮಾಣ ಪತ್ರವನ್ನು ನೀಡಲಾಯಿತು. ಪೋಷಣ್ ಭಾರತ್ ಹಾಗೂ ನಿಪುಣ್ ಭಾರತ್ ಅಭಿಯಾನದಡಿ ಗರ್ಭಿಣಿ ಮಹಿಳೆಯರಿಗೆ ಶೀಮಂತ ಹಾಗೂ ಮಕ್ಕಳಿಗೆ ಅನ್ನಪ್ರಾಸನ ಕಾರ್ಯಕ್ರಮ ಮಾಡಲಾಯಿತು.
ಕಲ್ಲಹಳ್ಳಿಯಲ್ಲಿ ಕೆಲವು ಜನರಿಗೆ ನಿವೇಶನ ಇಲ್ಲದವರು ಅರ್ಜಿ ಸಲ್ಲಿಸಿದ್ದು, ಅವರಿಗೆ ಆಶ್ರಯ ಯೋಜನೆಯಡಿ ಮನೆಗಳನ್ನು ಕಟ್ಟಿಸಿ ಕೊಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಗ್ರಾಮದಲ್ಲಿ ಮೇಲು ಸೇತುವೆ, ಪಹಣಿ, ನಿವೇಶನ, ಕುಡಿಯುವ ನೀರಿನ ಸಮಸ್ಯೆ, ಇನಾಮು ರದ್ದತಿ, ಹೈಸ್ಕೂಲ್ ನಿರ್ಮಾಣ, ಸ್ಮಶಾನಭೂಮಿ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರುಗಳನ್ನು ಪ್ರಸ್ತಾಪಿಸಿದರು.
ಎಲ್ಲರ ಅಹವಾಲುಗಳನ್ನು ಸಮಾಧಾನದಿಂದ ಆಲಿಸಿದ ಡಿಸಿ ಅನಿರುದ್ಧ್ ಶ್ರವಣ್ ಅವರು ತಮ್ಮ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲಾಗುವುದು ಎಂದು ಜನರಿಗೆ ಅಶ್ವಾಸನೆ ನೀಡಿದರು.
ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಕಲ್ಲಹಳ್ಳಿ ಗ್ರಾಮದ ಮಧ್ಯದಲ್ಲಿ ಮೈನ್ಸ್ ಲಾರಿಗಳು ಸಂಚರಿಸುತ್ತಿದ್ದು, ಟ್ರಾಫಿಕ್, ಧೂಳುವಿನಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಡಿ.ಎಂ.ಎಫ್ ಅಥವಾ ಸರ್ಕಾರದ ಅನುದಾನದಿಂದ ಬೈಪಾಸ್ ರಸ್ತೆ ನಿರ್ಮಾಣ ಮಾಡಲಾಗುವುದು ಎಂದರು. ಕುಡಿಯುವ ನೀರಿನ ಸಮಸ್ಯೆ ಅರಿತ ಅವರು, ಗ್ರಾಮದಲ್ಲಿ ಕೆರೆ ಹಾಗೂ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ಇನ್ನೂ 5-6 ತಿಂಗಳಲ್ಲಿ ಊರಿನ ಸ್ವಚ್ಛತೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಒಳಗೊಂಡಂತೆ ಇತರೆ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪಿಡಿಒ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಕ್ರಮ ವಹಿಸುವಂತೆ ಈ ಸಂದರ್ಭದಲ್ಲಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನದ ನಿಮಿತ್ತ ವೇದಿಕೆ ಆವರಣದಲ್ಲಿ ಹಾಕಲಾಗಿದ್ದ ದುಡಿಯೋಣ ಬಾ 100 ದಿನಗಳ ಅಭಿಯಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಅಭಿಯಾನ, ಕ್ಷಯರೋಗದ ಕುರಿತು ಜಾಗೃತಿ ಅಭಿಯಾನ, ಕೃಷಿ ಇಲಾಖೆಯ ವತಿಯಿಂದ ಕೃಷಿ ತೋಟಗಾರಿಕೆ ವಸ್ತು ಪ್ರದರ್ಶನ ಹಾಗೂ ತಾಂಡ ಮಹಿಳೆಯರಿಂದ ಏರಿ್ಡಸಲಾಗಿದ್ದ ನೃತ್ಯ ಪ್ರದರ್ಶನ ಗಮನಸೆಳೆಯಿತು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಸಿದ್ದಾರಾಮೇಶ್ವರ, ತಹಶೀಲ್ದಾರ್ ವಿಶ್ವಜಿತ ಮೆಹತಾ, ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಕುಂತಲ ಬಾಯಿ, ಉಪಾಧ್ಯಕ್ಷೆ ಶಾರದ, ಡಿಡಿಎಲ್ಆರ್ ಕೇಶವಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.