ಮುದ್ದೇಬಿಹಾಳ ತಾಲೂಕಿನ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ : ಪರಿಶೀಲನೆ
ವಿಜಯಪುರ19 : ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮುದ್ದೇಬಿಹಾಳ ತಹಶೀಲ್ದಾರ ಕಾರ್ಯಾಲಯಕ್ಕೆ ಭೇಟಿ ನೀಡಿ ವಿವಿಧ ಕಚೇರಿಗಳ ಕಾರ್ಯನಿರ್ವಹಣೆ, ಕಡತಗಳ ಪರಿಶೀಲನೆ ನಡೆಸಿ ವಿವಿಧ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಕ್ಕಳ ಬಿಸಿಯೂಟದ ಬಗ್ಗೆ ಕಾಳಜಿ ವಹಿಸಬೇಕು. ಕಚೇರಿ ಕಾರ್ಯಗಳಿಗೆ ಬಂದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ತಾಲೂಕಿನ ಪಿಯು ಕಾಲೇಜ್ಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಯಾವುದೇ ಮೂಲಭೂತ ಸೌಲಭ್ಯದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಮುದ್ದೇಬಿಹಾಳ ಹೊಸ ತರಕಾರಿ ಮಾರುಕಟ್ಟೆಯಲ್ಲಿ ಜನದಟ್ಟಣೆ ಹೆಚ್ಚಾಗಿರುವುದರಿಂದ ಜನರಿಗೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ವಹಿಸಬೇಕು. ತಾಲೂಕಿನ ವಿವಿಧ ಶಾಲೆಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಪರವಾನಿಗೆ ಇಲ್ಲದ ತಂಬಾಕು ಉತ್ಪನ್ನಗಳ ಮಾರಾಟ ನಿರ್ಬಂಧಿಸಬೇಕು. ಯಾವುದೇ ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳಿದ್ದಲ್ಲಿ ಕಾನೂನಿನ ರಿತ್ಯ ಕ್ರಮಕೈಗೊಂಡು ಅಂಗಡಿಗಳ ತೆರವಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಕುಡಿಯುವ ನೀರು ಪೂರೈಸುವಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಶುದ್ಧ ಕುಡಿಯುವ ನೀರು ಒದಗಿಸಬೇಕು. ಮಳೆಗಾಲವಿರುವುದರಿಂದ ಸಾಂಕ್ರಾಮಿಕ ರೋಗಗಳ ಹೆಚ್ಚಳವಾಗುವುದರಿಂದ ಈ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ತಾಲೂಕಿನಾದ್ಯಂತೆ ಸ್ವಚ್ಛತೆಗೆ ಆದ್ಯತೆ ನೀಡಬೇಕು. ರೋಗ ರುಜಿನಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಯಾವುದೇ ಅಹಿತಕರ ಘಟನೆ ಜರುಗಿದರೆ ಸಂಬಂಧಿಸಿದವರನ್ನೇ ಹೊಣೆಯಾಗಿಸಿ ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಸಿದರು.
ಮುದ್ದೇಬಿಹಾಳ ತಹಶೀಲ್ದಾರ ಸಿ.ಎ.ಗುಡದಿನ್ನಿ ಸೇರಿದಂತೆ ತಾಲೂಕಿನ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.