ಜಿಲ್ಲಾಡಳಿತದಿಂದ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ಲೋಕದರ್ಶನ ವರದಿ
ವಿಜಯಪುರ 09: ಜಿಲ್ಲಾಡಳಿತದ ವತಿಯಿಂದ ಅ.26 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕುರಿತು ವಿಜಯಪುರ ಉಪ ವಿಭಾಗಾಧಿಕಾರಿಗಳಾದ ಶ್ರೀಮತಿ ಜುಫಿಶಾನ ಹಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಅ.26ರ ಬೆಳಿಗ್ಗೆ 9:30 ಗಂಟೆಗೆ ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ ಹನುಮಂತರಾಯ ರಂಗಮಂದಿರದವರೆಗೆ ವಿವಿಧ ಕಲಾತಂಡಗಳೊಂದಿಗೆ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ, ಬೆಳಿಗ್ಗೆ 10:30ಕ್ಕೆ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಜಯಂತಿ ಕಾರ್ಯಕ್ರಮಕ್ಕೆ ಆಮಂತ್ರಣ ಪತ್ರಿಕೆ, ವೇದಿಕೆ ಅಲಂಕಾರ, ಜಯಂತಿ ಕಾರ್ಯಕ್ರಮಕ್ಕೆ ಅತಿಥಿಗಳಿಗೆ ಆಹ್ವಾನ, ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಅವರ ವಿಚಾರಧಾರೆಗಳ ಕುರಿತು ಉಪನ್ಯಾಸ, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸುವುದೂ ಸೇರಿದಂತೆ ವೇದಿಕೆ ಕಾರ್ಯಕ್ರಮಕ್ಕೆ ಅಗತ್ಯ ರೂಪುರೇಷ ಸಿದ್ಧಪಡಿಸಿಕೊಳ್ಳುವುದು ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ವೃತ್ತಗಳಿಗೆ ದೀಪಾಲಂಕಾರ, ಆಸನ ವ್ಯವಸ್ಥೆ, ವೇದಿಕೆ ಸಿದ್ಧತೆ, ನೃತ್ಯ ರೂಪಕ ಏರಿ್ಡಸುವುದೂ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಸಮಾಜದ ಮುಖಂಡರು ತಮ್ಮ ಅಗತ್ಯ ಸಲಹೆ ಸೂಚನೆ ನೀಡಿದರು.ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಅವರು ಎಲ್ಲರನ್ನೂ ಸ್ವಾಗತಿಸಿ, ಕಾರ್ಯಕ್ರಮದ ರೂಪುರೇಷ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಡಿವೈಎಸ್ಪಿ ನಾಗರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ ಸೇರಿದಂತೆ ಮಳಸಿದ್ದಪ್ಪ ನಾಯ್ಕೊಡಿ, ರವಿ ಬಿಸ್ನಾಳ, ಮಲ್ಲಿಕಾರ್ಜುನ ಬಟಗಿ, ಬಿ.ಎಸ್.ಗಸ್ತಿ, ಸಿದ್ದು ರಾಯಣ್ಣವರ, ಗೌಡಪ್ಪ ಬಡಿಗೇರ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ, ಎಂ.ಆರ್.ಗುರಿಕಾರ, ಮಾಂತೇಶ ಸಾಸಬಾಳ, ಎಂ.ಆರ್.ದೊಡಮನಿ, ಬಾಪು ಜಾನಮಟ್ಟಿ, ಆದಪ್ಪ ಬಿರಾದಾರ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.