ಕೆಪಿಎಸ್‌ಸಿ ಪರೀಕ್ಷೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ; ಬಿಗಿ ಪೊಲೀಸ್ ಭದ್ರತೆ-ಸಿಸಿಟಿವಿ ನಿಗಾ
ಲೋಕದರ್ಶನ ವರದಿ
ವಿಜಯಪುರ 13 : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವತಿಯಿಂದ ನವೆಂಬರ್ 15ರಂದು ನಡೆಯಲಿರುವ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಪೂರ್ವಭಾವಿ ಪರೀಕ್ಷೆಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಯಾವುದೇ ಲೋಪದೋಷಗಳಿಲ್ಲದೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್. ಕೆ. ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ 8,117 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಕೆಪಿಎಸ್‌ಸಿ ನಿಗದಿಪಡಿಸಿರುವ ಪರೀಕ್ಷಾ ಮಾರ್ಗಸೂಚಿಯಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರಶ್ನೆಪತ್ರಿಕೆಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಖಜಾನೆಯಲ್ಲಿ ಭದ್ರವಾಗಿ ಇರಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಎಂಟು ಮಾರ್ಗಗಳನ್ನು ಗುರುತಿಸಲಾಗಿದೆ.
ಪ್ರತಿ ಮಾರ್ಗಕ್ಕೂ ಮಾರ್ಗಾಧಿಕಾರಿಗಳನ್ನು ನೇಮಿಸಿ ಪೊಲೀಸ್ ಭದ್ರತೆಯೊಂದಿಗೆ ಪ್ರಶ್ನೆಪತ್ರಿಕೆಗಳನ್ನು ಸಾಗಿಸಲಾಗುವುದು. ಪರೀಕ್ಷೆ ಆರಂಭವಾಗುವ ಕನಿಷ್ಠ ಒಂದು ಗಂಟೆ ಮುಂಚಿತವಾಗಿ ಎಲ್ಲ ಕೇಂದ್ರಗಳಿಗೂ ಪ್ರಶ್ನೆಪತ್ರಿಕೆ ತಲುಪುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಮುಖ್ಯ ಅಧೀಕ್ಷಕರು, ವೀಕ್ಷಕರು ಹಾಗೂ ಪ್ರಶ್ನೆಪತ್ರಿಕೆಗಳ ಉಸ್ತುವಾರಿಗಾಗಿ ಸಿಬ್ಬಂದಿ ನಿಯೋಜಿಸಲಾಗಿದೆ. ಇವರ ಸಮ್ಮುಖದಲ್ಲಿಯೇ ಪ್ರಶ್ನೆಪತ್ರಿಕೆಗಳನ್ನು ತೆರೆಯಲಾಗುವುದು. ಪ್ರತಿ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ಪ್ರಶ್ನೆಪತ್ರಿಕೆ ತೆರೆಯುವ ಭದ್ರತಾ ಕೊಠಡಿಯಲ್ಲಿಯೂ ಸಿಸಿಟಿವಿ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಕೇಂದ್ರಗಳ ದೃಶ್ಯಾವಳಿಗಳನ್ನು ನೇರ ವೆಬ್‌ಕಾಸ್ಟಿಂಗ್ ಮೂಲಕ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸ್ಥಾಪಿಸಿರುವ ಕೇಂದ್ರದಿಂದ ಮೇಲ್ವಿಚಾರಣೆ ಮಾಡಲಾಗುವುದು.