ತುರ್ತು ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ : ಡಿಸಿ ಜಾನಕಿ
ಬಾಗಲಕೋಟೆ: ಯುದ್ದದಂತಹ ಸನ್ನಿವೇಶ ಹಾಗೂ ತುರ್ತು ಪರಿಸ್ಥಿತಿ ಎದುರಾದಲ್ಲಿ ಸಾರ್ವಜನಿಕರ ರಕ್ಷಣೆಗೆ ಜಿಲ್ಲಾಡಳಿತ ಸನ್ನದ್ದವಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು. ರವಿವಾರ ಯುದ್ದ ಅಥವಾ ಇನ್ನೀತರ ವಿಪತ್ತು ನಿರ್ವಹಣೆ ಕುರಿತು ತುರ್ತು ಕ್ರಮಕೈಗೊಳ್ಳಲು ಗೂಗಲ್ ಮೀಟ್ ಮೂಲಕ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿಗಳು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಈಗಾಗಲೇ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಎಲ್ಲ ರೀತಿಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಮೂರು ತಿಂಗಳವರೆಗೆ ಬೇಕಾಗುವಷ್ಟು ಆಹಾರಧಾನ್ಯಗಳ ದಾಸ್ತಾನು ಇಡಲಾಗುತ್ತಿದೆ. ಅಲ್ಲದೇ ಅಕ್ರಮವಾಗಿ ದಾಸ್ತಾನು ಹಾಗೂ ಕಾಳಸಂತೆಯಲ್ಲಿ ಮಾರಾಟವಾಗದಂತೆ ಹೆಚ್ಚಿನ ನಿಗಾ ವಹಿಸಲು ಆಹಾರ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಕುಡಿಯಲು ನೀರು ಹಾಗೂ ಆರೋಗ್ಯ ಸೌಲಭ್ಯಕ್ಕಾಗಿ ಬೆಡ್‌ಗಳ ಹಾಗೂ ಓಷಧಿಗಳ ದಾಸ್ತಾನು ಇಡಲು ತಿಳಿಸಲಾಗಿದೆ. ತುರ್ತು ವಾಹನಗಳಿಗೆ ಬೇಕಾಗುವ ಇಂಧನ ವ್ಯವಸ್ಥೆ ಸಹ ಮಾಡಿಕೊಳ್ಳಲಾಗುತ್ತಿದೆ. ಅಗ್ನಿಶಾಮಕ ದಳದವರು ದಿನದ 24 ಗಂಟೆಗಳ ಕಾಲ ಸನ್ನದ್ದ ಸ್ಥಿತಿಯಲ್ಲಿರಲು ಸೂಚಿಸಲಾಗಿದೆ. ಸಾಮಾಜಿಕ ತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳ ಮೇಳ ನಿರಂತರ ನಿಗಾವಹಿಸಲಾಗುತ್ತಿದ್ದು, ವದಂತಿ ಹರಡುವುವವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವುದೇ ವದಂತಿಗಳಿಗೆ ಕಿವಿಗೊಡದೇ ಸಾರ್ವಜನಿಕರು ಸೂಕ್ತ ತಿಳುವಳಿಕೆ ಹೊಂದುವ ಅಗತ್ಯವಿದೆ. ದಿನದ 24 ಗಂಟೆಗಳ ಕಾಲ ಜಿಲ್ಲಾ ಹಾಗೂ ತಾಲೂಕಾ ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರಯಲಾಗಿದೆ. ಸಹಾಯವಾಣಿ ಕೇಂದ್ರಗಳು ವ್ಯವಸ್ಥಿತವಾಗಿ ನಡೆಯಲು ಜಿಲ್ಲಾ ಹಾಗೂ ತಾಲೂಕಾ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲು ಸೂಚಿಸಲಾಗಿದೆ. ಸಹಾಯವಾಣಿ ಕೇಂದ್ರದ ಪ್ರತಿದಿನದ ವರದಿಯನ್ನು ನೀಡಲು ಸೂಚನೆ ನೀಡಲಾಗಿದೆ ಎಂದರು. ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ನೀಡಲಾಗಿರುವ ಮಾರ್ಗಸೂಚಿಗಳನ್ನು ಗ್ರಾಮ ಪಂಚಾಯತ ಮಟ್ಟದಲ್ಲಿಯೂ ತಲುಪಿಸುವ ಕೆಲಸವಾಗಬೇಕು. ತುರ್ತು ಪರಿಸ್ಥಿತಿಯಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಮಿಲಿಟರಿಯಲ್ಲಿ ಸೈನಿಕರು ಯಾವ ಸ್ಥಿತಿಯಲ್ಲಿ ಇದ್ದಾರೆ ಅದೇ ಸ್ಥಿತಿಯಲ್ಲಿ ನಾವು ಇದ್ದೇವೆ ಎಂಬ ಭಾವನೆ ಇಟ್ಟುಕೊಂಡು ಕೆಲಸ ಮಾಡಲು ತಿಳಿಸಿದರು. ಜಿಲ್ಲೆಯ ವಿವಿದೆಡೆ ಮಾಕ್ ಡ್ರೀಲ್ ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ಉಪವಿಭಾಗಾಧಿಕಾರಿಗಳಾದ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ, ನಗರಾಭಿವೃದ್ದಿ ಕೋಶದ ಪ್ರಭಾರಿ ಯೋಜನಾ ನಿರ್ದೇಶಕ ಸುರಖೋಡ ಸೇರಿದಂತೆ ಆಯಾ ತಾಲೂಕಿನ ತಹಶೀಲ್ದಾರ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.