ಬರ ನಿರ್ವಹಣೆ ಸಮರ್ಕವಾಗಿ ನಿರ್ವಹಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ. ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ
ಗದಗ ಅ.31: ಜಿಲ್ಲೆಯಲ್ಲಿ ಮುಂಗಾರು ಮಳೆ ಬಹುತೇಕ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ರೈತರಿಗೆ ಬೆಳೆ ಪರಿಹಾರ ಹಾಗೂ ಉದ್ಯೋಗ ಸೃಷ್ಟಿ ಸೇರಿದಂತೆ ಬರ ಪರಿಸ್ಥಿತಿಯನ್ನು ಸಮರ್ಕವಾಗಿ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ. ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅಕ್ಟೋಬರ್ 31ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಮಟ್ಟದ ಪ್ರಗತಿ ಪರೀಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಿಂದ ಸಭೆಯಲ್ಲಿ ಪಾಲ್ಗೊಂಡಿದ್ದರು. ಜಿಲ್ಲೆಯಲ್ಲಿ ಬೆಳೆಯಬಹುದಾದ ಪರ್ಯಾಯ ಬೆಳೆಗಳ ಕುರಿತು ರೈತರಿಗೆ ಕೃಷಿ ಇಲಾಖೆಯ ಅಧಿಕಾರಿಗಳು ಸೂಕ್ತ ಮಾಹಿತಿ ನೀಡಬೇಕು. ಸ್ಥಳೀಯ ಹವಾಮಾನ ಹಾಗೂ ಮಣ್ಣಿನ ಗುಣಧರ್ಮಕ್ಕೆ ಅನುಗುಣವಾಗಿ ಬೆಳೆಗಳನ್ನು ಬೆಳೆಯಲು ರೈತರನ್ನು ಪ್ರೋತ್ಸಾಹಿಸಬೇಕು.
ಬರ ಪರಿಹಾರಕ್ಕಾಗಿ ಜಿಲ್ಲಾಡಳಿತದಿಂದ ಈಗಾಗಲೇ 263 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂಬ ಮಾಹಿತಿ ಪಡೆದ ಅವರು, ಪರಿಹಾರ ವಿತರಣೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಬೆಳೆ ವಿಮೆ ಪರಿಹಾರವೂ ಅರ್ಹ ರೈತರಿಗೆ ಯಾವುದೇ ವಿಳಂಬವಿಲ್ಲದೆ ಸಮರ್ಕವಾಗಿ ತಲುಪುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು. ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುಂಚಿತವಾಗಿಯೇ ಖಾಸಗಿ ಕೊಳವೆಬಾವಿಗಳನ್ನು ಗುರುತಿಸಿ, ಅಗತ್ಯವಿದ್ದಲ್ಲಿ ಅವುಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು. ನಗರ ಪ್ರದೇಶಗಳಲ್ಲಿಯೂ ಕುಡಿಯುವ ನೀರಿನ ಪೂರೈಕೆಯನ್ನು ಸಮರ್ಕವಾಗಿ ನಿರ್ವಹಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಎದುರಾದ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತ್ವರಿತವಾಗಿ ಪರಿಹರಿಸಬೇಕು ಎಂದು ನಿರ್ದೇಶನ ನೀಡಿದರು.
ಜಾನುವಾರುಗಳಿಗೆ ಅಗತ್ಯವಿರುವ ಮೇವಿನ ಲಭ್ಯತೆ ಹಾಗೂ ಮುಂದಿನ ದಿನಗಳ ಬೇಡಿಕೆಯನ್ನು ಈಗಿನಿಂದಲೇ ಅಂದಾಜಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ನೀರಾವರಿ ಸೌಲಭ್ಯ ಹೊಂದಿರುವ ರೈತರಿಗೆ ಮೇವು ಬೆಳೆಸಲು ಉತ್ತೇಜನ ನೀಡುವುದರ ಜತೆಗೆ ಅಗತ್ಯ ಮೇವು ಬೀಜಗಳನ್ನು ವಿತರಿಸಬೇಕು. ಈ ಮೂಲಕ ಮುಂದಿನ ದಿನಗಳಲ್ಲಿ ಮೇವಿನ ಅಭಾವ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಆಹಾರ ಇಲಾಖೆ ಅಧಿಕಾರಿಗಳು ವಿವಿಧೆಡೆ ಪರೀಶೀಲನೆ ಹಾಗೂ ದಾಳಿ ನಡೆಸುವ ಸಂದರ್ಭದಲ್ಲಿ ಡೈರಿ ಉತ್ಪನ್ನಗಳ ಗುಣಮಟ್ಟ ಮತ್ತು ಸಂಬಂಧಿತ ಅಂಶಗಳ ಬಗ್ಗೆಯೂ ಪರೀಶೀಲನೆ ನಡೆಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಎ.ಎ. ಕಂಬಾಳಿಮಠ, ಎಂ.ವಿ. ಚಳಗೇರಿ, ಡಾ. ನಂದಾ ಹಣಬರಟ್ಟಿ, ಜಿ.ಜೆ. ರುದ್ರಣ್ಣಗೌಡ, ಆರ್.ಎಸ್. ಬುರಡಿ, ಎಸ್.ಡಿ. ಪಾಟೀಲ, ಡಾ. ಎಸ್.ಎಸ್. ನೀಲಗುಂದ, ಡಾ. ಬಸವರಾಜ ಬಳ್ಳಾರಿ, ಅಮೀತ್ ಬಿದರಿ, ರಾಧಾ ಮಣ್ಣೂರ, ಡಾ. ಎಚ್.ಬಿ. ಹುಲಗಣ್ಣನವರ, ರಾಜಾರಾಮ ಪವಾರ, ಶರಣು ಗೋಗೇರಿ, ವಸಂತ ಮಡ್ಲೂರ, ಜಯಲಕ್ಷ್ಮಿ ವಸ್ತ್ರದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.