ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ District-level review meeting on the progress of guarantee schemes

ಲೋಕದರ್ಶನ ವರದಿ 

  ಗದಗ   21  :  ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯದಿಂದ ಯಾವ ಅರ್ಹ ಫಲಾನುಭವಿಯೂ ವಂಚಿತರಾಗದಂತೆ ನೋಡಿಕೊಳ್ಳಬೇಕು  ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ತಿಳಿಸಿದರು. ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜರುಗಿದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರಕುವಲ್ಲಿ ವಿಳಂಬವಾಗಬಾರದು.

ಈ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು.  ಬಡಜನರನ್ನು  ಆರ್ಥಿಕವಾಗಿ  ಸಬಲೀಕರಣಗೊಳಿಸಲು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದ್ದು ಪೂರ್ಣ ಪ್ರಮಾಣದಲ್ಲಿ ಫಲಾನುಭವಿಗಳಿಗೆ ನಿಗದಿತ ಸಮಯದಲ್ಲೇ ಸೌಲಭ್ಯಗಳು ದೊರಕುವಂತಾಗಬೇಕು.  ಮಹಿಳೆಯರು ಸ್ವಾವಲಂಬಿಯಾಗಿ ಜೀವನ ನಡೆಸುವ ಉದ್ದೇಶದಿಂದ ಸರ್ಕಾರವು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದ್ದು  ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು  ಎಂದರು.  

ಗದಗ ನಗರದಲ್ಲಿನ ಹಳೇ ಬಸ್ ನಿಲ್ದಾಣ ಹಾಗೂ ಹೊಸ ಬಸ್ ನಿಲ್ದಾಣಗಳ ಆವರಣ  ಸ್ವಚ್ಛತೆಯಿಂದ ಇರುವಂತೆ ನೋಡಿಕೊಳ್ಳಬೇಕು. ಅಂಗವಿಕಲರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥಿವಾಗಿ ಇರುವಂತೆ ಕ್ರಮ ವಹಿಸಬೇಕು.  ಮಹಿಳೆಯರಿಗೆ ವಿಶ್ರಾಂತಿ ಕೊಠಡಿಯ ಸ್ವಚ್ಛತೆ ಕುರಿತು ಗಮನಹರಿಸಬೇಕು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿನ ಬಸ್ ಸ್ಟ್ಯಾಂಡ್‌ಗಳು ಸ್ವಚ್ಛವಾಗಿರುವಂತೆ ಹಾಗೂ ಮೂಲಭೂತ ಸೌಲಭ್ಯ ಇರುವಂತೆ ಗಮನ ಹರಿಸಬೇಕು ಎಂದು ಬಿ.ಬಿ.ಅಸೂಟಿ ತಿಳಿಸಿದರು. 

ಗದಗ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಟಾನದ ಪ್ರಾಧಿಕಾರದ ಸದಸ್ಯ ಅಶೋಕ ಮಂದಾಲಿ ಮಾತನಾಡಿ  ಜಿಲ್ಲೆಯ ಲಕ್ಕುಂಡಿ ಸ್ಥಳವು ಐತಿಹಾಸಿಕ ಸ್ಥಳದಲ್ಲೊಂದಾಗಿದೆ.  ಐತಿಹಾಸಿಕ ಲಕ್ಕುಂಡಿ ಸ್ಥಳಕ್ಕೆ  ಪ್ರವಾಸೋದ್ಯಮದ ಉದ್ದೇಶಕ್ಕಾಗಿಯೇ ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕು. ಪಂಚಗ್ಯಾರಂಟಿ ಯೋಜನೆಗಳ ಸೌಲಭ್ಯ ಫಲಾನುಭವಿಗಳಿಗೆ ತಲುಪುವಲ್ಲಿ ವಿನಾಕಾರಣ  ವಿಳಂಬವಾಗಬಾರದು ಎಂದು ಸೂಚಿಸಿದರು.