ಜಮಖಂಡಿಯಲ್ಲಿ ಡಾ. ವೀರೇಂದ್ರ ಹೆಗ್ಗಡೆ ಅವರ 80ನೇ ಜನ್ಮದಿನಾಚರಣೆ
ಲೋಕದರ್ಶನ ವರದಿ
ಜಮಖಂಡಿ 26 : ನಗರದ ಮುಧೋಳ ರಸ್ತೆಯ ಆರ್.ಟಿ.ಒ. ಕಚೇರಿ ಸಮೀಪದಲ್ಲಿರುವ ಜೈನ್ ಅನಾಥಾಶ್ರಮ ಹಾಗೂ ವೃದ್ಧಾಶ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 80ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ನಗರದ ಹೊರವಲಯದ ಜೈನ್ ಅನಾಥಾಶ್ರಮ ಹಾಗೂ ವೃದ್ಧಾಶ್ರಮದಲ್ಲಿರುವ ವೃದ್ಧರು ಮತ್ತು ಮಕ್ಕಳಿಗೆ ಬೆಳಗಿನ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ನಿಂಗಪ್ಪ ಗುಡಸಲಮನಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಕಳೆದ 44 ವರ್ಷಗಳಿಂದ ನಿರಂತರವಾಗಿ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಮಹಿಳೆಯರು ಕೇವಲ ಮನೆಯ ಅಡುಗೆ ಕೋಣೆಗೆ ಸೀಮಿತವಾಗದೆ ಪುರುಷರಿಗೆ ಸಮಾನವಾಗಿ ಸ್ವಾವಲಂಬಿ ಜೀವನ ನಡೆಸಬೇಕು ಎಂಬ ಮಹದಾಸೆಯನ್ನು ಡಾ. ವೀರೇಂದ್ರ ಹೆಗ್ಗಡೆಯವರು ಹೊಂದಿದ್ದಾರೆ.
ಈ ಉದ್ದೇಶದಿಂದ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಕಲ್ಪಿಸಿ, ಸ್ವಂತ ಉದ್ಯೋಗ ಆರಂಭಿಸುವ ಮೂಲಕ ಆರ್ಥಿಕವಾಗಿ ಸಬಲರಾಗಲು ಪ್ರೋತ್ಸಾಹಿಸಲಾಗುತ್ತಿದೆ ಎಂದರು. ಯಾವುದೇ ಬಡ ಕುಟುಂಬಗಳು ಆರ್ಥಿಕ ಸಂಕಷ್ಟದಿಂದ ಬಳಲಬಾರದು. ಪ್ರತಿಯೊಬ್ಬರೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಗೌರವಯುತ ಜೀವನ ನಡೆಸಬೇಕು ಎಂಬ ಆಶಯದೊಂದಿಗೆ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ.
ಜಮಖಂಡಿ ನಗರದಲ್ಲಿ ಕಳೆದ 13 ವರ್ಷಗಳಿಂದ ನಿರಂತರವಾಗಿ ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಸಂಸ್ಥೆಯು ಇಂದು ಜನರ ವಿಶ್ವಾಸ ಗಳಿಸಿದೆ ಎಂದು ತಿಳಿಸಿದರು. ವಿಶೇಷ ಚೇತನರಿಗೆ ಸೈಕಲ್ ವಿತರಣೆ, ಆರೋಗ್ಯ ತಪಾಸಣಾ ಶಿಬಿರ ಸೇರಿದಂತೆ ಹಲವಾರು ಜನಪರ ಹಾಗೂ ಸಾಮಾಜಿಕ ಸೇವಾ ಕಾರ್ಯಗಳನ್ನು ಸಂಸ್ಥೆ ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 80ನೇ ಜನ್ಮದಿನವನ್ನು ಸೇವಾ ಮನೋಭಾವದಿಂದ ಆಚರಿಸಲಾಗುತ್ತಿದೆ ಎಂದರು.