ಶಿಕ್ಷಣವು ಕೇವಲ ಅಕ್ಷರ ಜ್ಞಾನವಲ್ಲ, ವ್ಯಕ್ತಿತ್ವ ರೂಪಿಸುವ ಮಹಾನ್ ಶಕ್ತಿ : ಶಾಸಕ ಪಠಾಣ
ಶಿಗ್ಗಾವಿ 11 : ಶಿಕ್ಷಣವು ಕೇವಲ ಅಕ್ಷರ ಜ್ಞಾನವಲ್ಲ, ವ್ಯಕ್ತಿತ್ವವನ್ನು ರೂಪಿಸುವ ಮತ್ತು ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವ ಮಹಾನ್ ಶಕ್ತಿಯಾಗಿದೆ ಎಂದು ಶಿಗ್ಗಾವಿ ಸವಣೂರ ಶಾಸಕ ಯಾಸೀರ ಅಹ್ಮದಖಾನ ಪಠಾಣ ಹೇಳಿದರು.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೇಟ ಹಾಲನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಭಾರತದ ಶಿಕ್ಷಣ ವ್ಯವಸ್ಥೆಗೆ ಭದ್ರ ಬುನಾದಿಯನ್ನು ಹಾಕಿದ ಮಹಾನ್ ಚೇತನ,
14 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣ ಸಿಗಬೇಕು ಎಂಬುದು ಅವರ ಕನಸಾಗಿತ್ತು ಅಲ್ಲದೇ ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗ ಸ್ಥಾಪನೆಯಲ್ಲಿ ಅವರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಶಿಕ್ಷಣದ ಮೂಲಕ ಮಾತ್ರ ಸಮಾಜದಲ್ಲಿರುವ ಅಸಮಾನತೆ ಮತ್ತು ಬಡತನವನ್ನು ಹೋಗಲಾಡಿಸಲು ಸಾಧ್ಯ ಎಂದು ಅವರು ಬಲವಾಗಿ ನಂಬಿದ್ದರು ಆದ್ದರಿಂದಇಂದಿನ ಈ ವಿಶೇಷ ದಿನದಂದು ಶಿಕ್ಷಣವನ್ನು ನಮ್ಮ ಜೀವನದ ಅತಿದೊಡ್ಡ ಅಸ್ತ್ರವನ್ನಾಗಿ ಮಾಡಿಕೊಳ್ಳಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ಸಚಿವ ಯು.ಟಿ.ಖಾದರ, ವಿಧಾನಪರಿಷತ್ ಸದಸ್ಯೆ ಬಲ್ಕಿಸ್ ಬಾನು, ಅಬ್ದುಲ್ ಜಬ್ಬಾರ್,ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್-ಹುಸೈನಿ ಸೇರಿದಂತೆ ಶಿಕ್ಷಣ ಪ್ರೇಮಿಗಳು ಸೇರಿದಂತೆ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.