ಶಿಕ್ಷಣ ವಿದ್ಯಾರ್ಥಿ ಜೀವನದ ತಪಸ್ಸು: ಡಿ.ಜಿ. ಸಾಗರ
Education is the penance of student life: D.G. Sagara
ಲೋಕದರ್ಶನ ವರದಿ
ಕಲಬುರಗಿ 23: ಶಿಕ್ಷಣವೆಂಬುದು ಒಂದು ತಪಸ್ಸು. ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಪಡೆಯುವುದು ಅತ್ಯಂತ ಮಹತ್ವದ ಘಟ್ಟವಾಗಿದ್ದು, ಗುರುಗಳ ಮಾರ್ಗದರ್ಶನದೊಂದಿಗೆ ಸ್ಪರ್ಧಾತ್ಮಕ ಮನೋಭಾವ, ಸ್ವಸಾಮರ್ಥ್ಯ ಹಾಗೂ ಬದ್ಧತೆಯನ್ನು ಬೆಳೆಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಹಾಗೂ ಹೋರಾಟಗಾರ ಡಿ.ಜಿ. ಸಾಗರ ಹೇಳಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ಅಧ್ಯಯನ ಸಂಸ್ಥೆಯ ಸಾಹಿತ್ಯ ಚಟುವಟಿಕೆಗಳ ಮುಕ್ತಾಯ ಹಾಗೂ ಹಿರಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದಲ್ಲ. ಜವಾಬ್ದಾರಿಯನ್ನು ಅರಿತು ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ದೇಶ ನಿರ್ಮಾಣ ಹಾಗೂ ಸಮಾಜ ಸುಧಾರಣೆಯಲ್ಲಿ ಯುವಜನರು ಪ್ರಮುಖ ಪಾತ್ರ ವಹಿಸಬೇಕು. ಸಾಮಾಜಿಕ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ, ಹೊಸ ಸಾಧನೆಗಳ ಮೂಲಕ ಸಮಾಜ ಗುರುತಿಸುವಂತಹ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಗುಲಬರ್ಗಾ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಪ್ರೊ. ರಮೇಶ ರಾಥೋಡ್ ಮಾತನಾಡಿ, ಕನ್ನಡ ಭಾಷೆ ಹೃದಯದ ಭಾಷೆಯಾಗಿದ್ದು, ಕನ್ನಡಿಗರಲ್ಲಿ ಏಕತೆ ಹಾಗೂ ಸೌಹಾರ್ದತೆ ಬೆಳೆಸುವ ಶಕ್ತಿ ಹೊಂದಿದೆ. ಜಾತಿ, ಮತ ಹಾಗೂ ಮೇಲು-ಕೀಳು ಭಾವನೆಗಳನ್ನು ಮರೆತು ಸಹಬಾಳ್ವೆ ಬೆಳೆಸಿಕೊಳ್ಳಬೇಕು ಎಂದರು. ಶಿಕ್ಷಣಾವಧಿ ಭವಿಷ್ಯದ ಬದುಕಿಗೆ ಹೂಡಿಕೆಯ ಕಾಲವಾಗಿದ್ದು, ಗುರಿ ಸಾಧನೆಗೆ ಪರಿಶ್ರಮ ಅಗತ್ಯ ಎಂದು ಹೇಳಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಕಲಾನಿಕಾಯದ ಡೀನ್ ಹಾಗೂ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆಯ ಬೆಳವಣಿಗೆಗಾಗಿ ಕುವೆಂಪು, ಬೇಂದ್ರೆ, ಕಾರಂತ, ಮಾಸ್ತಿ ಹಾಗೂ ಕಂಬಾರರ ಸಾಹಿತ್ಯವನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. 12ನೇ ಶತಮಾನದಲ್ಲಿ ನಡೆದ ಸಾಮಾಜಿಕ ಕ್ರಾಂತಿಯಿಂದ ಸಮಾನತೆಯ ಪ್ರಜ್ಞೆ ಬೆಳೆದಿದೆ. ಬಸವಣ್ಣನವರ ವಿಚಾರಗಳು ಇಂದಿಗೂ ಪ್ರಸ್ತುತವಾಗಿದ್ದು, ವಿದ್ಯಾರ್ಥಿಗಳು ಜೀವನದ ಸತ್ಯಗಳನ್ನು ಅರಿತು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಸಂದರ್ಶಕ ಪ್ರಾಧ್ಯಾಪಕ ಡಾ. ಸೂರ್ಯಕಾಂತ ಎಸ್. ಸುಜಾತ್ ಮಾತನಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ರಾಹುಲ್, ಐಶ್ವರ್ಯ ಹಾಗೂ ಆಶಿಫ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಜಯಭೀಮ ರಾವೂರ ಹಾಗೂ ರಾಜು ಅನಿಸಿಕೆ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಕನ್ನಡ ಸಂಶೋಧನಾ ಸಂಘ, ಕನ್ನಡ ಸಾಹಿತ್ಯ ಸಂಘದ ಪದಾಧಿಕಾರಿಗಳು, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಶ್ವಿನಿ ಬಟಾವಾಳ ಪ್ರಾರ್ಥಿಸಿದರು. ರೇಷ್ಮಾ ಸ್ವಾಗತಿಸಿದರು. ಸಚಿನ್ ಹಾಗೂ ಲಕ್ಷ್ಮೀ ಚೌಡಾಪುರ ಕಾರ್ಯಕ್ರಮ ನಿರ್ವಹಿಸಿದರು. ಶಿವರಾಜ ವಂದಿಸಿದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 