ಹೂವಿನಹಡಗಲಿಯಲ್ಲಿ ಸಂಭ್ರಮದಿಂದ ಈದ್ ಮಿಲಾದ್ ಆಚರಣೆ
ಹೂವಿನಹಡಗಲಿ, 25: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಮುಸ್ಲಿಂ ಸಮುದಾಯದವರು ಬುಧವಾರ ಈದ್ ಮಿಲಾದ್ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಿದರು.
ಈದ್ ಮಿಲಾದ್ ಅಂಗವಾಗಿ ಪಟ್ಟಣದ ವಿವಿಧ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಮುಸ್ಲಿಂ ಬಾಂಧವರು ಶ್ರದ್ಧಾ-ಭಕ್ತಿಯಿಂದ ಹಬ್ಬವನ್ನು ಆಚರಿಸಿದರು. ಪಟ್ಟಣದ ಎಲ್ಲ ಮಸೀದಿಗಳು ಹಾಗೂ ಪ್ರಮುಖ ಮೊಹಲ್ಲಾಗಳಲ್ಲಿ ವಿಶೇಷ ಪ್ರಾರ್ಥನೆಗಳನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಈದ್ ಮಿಲಾದ್ ಸಮಿತಿ ಹಾಗೂ ಮುಸ್ಲಿಂ ಧರ್ಮದ ಸಮುದಾಯದವರು ಆಯೋಜಿಸಿದ್ದ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಸಂಭ್ರಮಿಸಿದರು. ಮೆರವಣಿಗೆಯುದ್ದಕ್ಕೂ ಹಬ್ಬದ ವಾತಾವರಣ ಕಂಡುಬಂದಿತು.