ರಾಜ್ಯ

ಆಂಧ್ರಪ್ರದೇಶದಲ್ಲಿ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಿಗೆ ಎಂಟು ಬಲಿ

ಆಂಧ್ರಪ್ರದೇಶದಲ್ಲಿ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಿಗೆ ಎಂಟು ಬಲಿ
ವಿಜಯವಾಡ, ನ. 24  — ಆಂಧ್ರಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಎರಡು ದಂಪತಿ, ಇಬ್ಬರು ಅಯ್ಯಪ್ಪ ಭಕ್ತರು ಹಾಗೂ ಓರ್ವ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ.

ವಿಜಯನಗರಂ ಜಿಲ್ಲೆಯ ಭೋಗಾಪುರಂ ಸಮೀಪದ ಸುಂದರಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದಾರೆ. ಶ್ರೀಕಾಕುಳಂ ಜಿಲ್ಲೆಯ ಶ್ರೀಮುಖಲಿಂಗಂನ ಶಿವ ದೇವಾಲಯಕ್ಕೆ ಭೇಟಿ ನೀಡಿದ್ದ ಇವರು ವಿಶಾಖಪಟ್ಟಣಂ ಜಿಲ್ಲೆಯ ಸಂಗಿವಲಸ ಮತ್ತು ಮಧುರವಾಡದಲ್ಲಿರುವ ತಮ್ಮ ಊರುಗಳಿಗೆ ಮರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದರು. ಮೃತರನ್ನು ಬೊರ್ರ ಸತೀಶ್, ಅವರ ಪತ್ನಿ ಬೊರ್ರ ಶ್ರುತಿ, ವಾಕಲಪುಡಿ ಶ್ರೀನು, ಅವರ ಪತ್ನಿ ವಾಕಲಪುಡಿ ಕುಸುಮ ರಂಜನಿ ಹಾಗೂ ಕೊಂಡ ಸೂರಿಬಾಬು ಎಂದು ಗುರುತಿಸಲಾಗಿದೆ.

ಅಪಘಾತದ ವೇಳೆ ಕಾರು ಅತಿವೇಗದಲ್ಲಿ ಚಲಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಜಯನಗರಂನ ಸರ್ಕಾರಿ ಜನರಲ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸಚಿವರಾದ ಅನಿತಾ, ಕೊಂಡಪಲ್ಲಿ ಶ್ರೀನಿವಾಸ್, ಎಂ. ಪ್ರಸಾದ್ ರೆಡ್ಡಿ ಮತ್ತು ನಾರಾ ಲೋಕೇಶ್ ಸಂತಾಪ ವ್ಯಕ್ತಪಡಿಸಿ, ಮೃತರ ಕುಟುಂಬಗಳಿಗೆ ಅಗತ್ಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪಲ್ನಾಡು ಜಿಲ್ಲೆಯ ಕ್ರುಸೂರು ಮಂಡಲದ ಉಟುಕೂರು ಗ್ರಾಮದಲ್ಲಿ ದೇವಾಲಯದಿಂದ ಸ್ವಗ್ರಾಮಕ್ಕೆ ಮರಳುತ್ತಿದ್ದ ಅಯ್ಯಪ್ಪ ಭಕ್ತರ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ದಾಡಿ ಪೂರ್ಣಚಂದರ್ (50) ಮತ್ತು ದಡ್ಡುಬಾಟಿ ಶ್ರೀನಿವಾಸ ರಾವ್ (48) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತಿಬ್ಬರು ಭಕ್ತರು ಗಾಯಗೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನರಸರಾವ್‌ಪೇಟೆಯ ಸರ್ಕಾರಿ ಜನರಲ್ ಆಸ್ಪತ್ರೆಗೆ ರವಾನಿಸಿದ್ದಾರೆ.

ತಿರುಪತಿಯ ಗರುಡ ವಾರಧಿ ಸೇತುವೆ ಮೇಲೆ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ದ್ವಿಚಕ್ರ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು ಶ್ರೀರಾಮ ಎಂಜಿನಿಯರಿಂಗ್ ಕಾಲೇಜಿನ ಬಿ.ಟೆಕ್ ವಿದ್ಯಾರ್ಥಿನಿ ಕಿರಣ್ಮಯಿ (20) ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿನಿಯರನ್ನು ರುಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಿರಣ್ಮಯಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಸುದ್ದಿ ಓದಿ