ಪಾಲಿಕೆ ಸುತ್ತಮುತ್ತ 500ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ: ಡಿಸಿ
ಪಾಲಿಕೆ ಮೇಯರ್/ಉಪಮೇಯರ್ ಸ್ಥಾಯಿ ಸಮಿತಿಗಳ ಚುನಾವಣೆ
ಬಳ್ಳಾರಿ 11: ಇದೇ 18ರಂದು ನಡೆಯುವ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್/ಉಪಮೇಯರ್ ಹಾಗೂ ಸ್ಥಾಯಿ ಸಮಿತಿಗಳ ಚುನಾವಣೆಯ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಪಾಲಿಕೆ ಸುತ್ತಮುತ್ತ ಸುಮಾರು 500ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯಾದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
ಚುನಾವಣೆ ದಿನದಂದು ಮತದಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವುದರಿಂದ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಜನರ ಗುಂಪುಗೂಡಿ ತಿರುಗಾಡುವುದು ಮತ್ತಿತತರ ಚಟುವಟಿಕೆಗಳನ್ನು ನಿಷೇಧಿಸಲು ಪಾಲಿಕೆ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.