ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ-ರಜತ ಉಳ್ಳಾಗಡ್ಡಿಮಠ
ಲೋಕದರ್ಶನ ವರದಿ
ಹುಬ್ಬಳ್ಳಿ ನ.23: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಹುಬ್ಬಳ್ಳಿ ಕೇಂದ್ರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಜತ ಉಳ್ಳಾಗಡ್ಡಿಮಠ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರ ಸಭಾಂಗಣದಲ್ಲಿ ಹುಬ್ಬಳ್ಳಿ ಕೇಂದ್ರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 43,732 ಅರ್ಹ ಫಲಾನುಭವಿಗಳಲ್ಲಿ 43,177 ಫಲಾನುಭವಿಗಳು ಗೃಹ ಲಕ್ಷ್ಮಿ ಯೋಜನೆಯ ಪ್ರಯೋಜನೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ 36 ಕಂತುಗಳ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲು ಕ್ರಮ ವಹಿಸಲಾಗಿದೆ.
ಅರ್ಹ ಫಲಾನುಭವಿಗಳು ಗೃಹ ಲಕ್ಷ್ಮಿ ಯೋಜನೆಯಿಂದ ಹೊರಗುಳಿಯದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಗೃಹ ಜ್ಯೋತಿ ಯೋಜನೆಯಡಿ ಈಗಾಗಲೇ 45,165 ಮನೆಗಳು ನೊಂದಣಿ ಆಗಿರುತ್ತವೆ. ಬಾಕಿ ಉಳಿದ ಫಲಾನುಭವಿಗಳನ್ನು ನೋಂದಣಿ ಮಾಡಿಸಲು ಕ್ರಮ ವಹಿಸಬೇಕು. ಅನ್ನಭಾಗ್ಯ ಯೋಜನೆಯಡಿ ಸಮರ್ಕವಾಗಿ ಪಡಿತರವನ್ನು ವಿತರಿಸಬೇಕು.
ಅಕ್ರಮ ಅಕ್ಕಿ ಸಾಗಾಟವನ್ನು ತಡೆಯಲು ಅಧಿಕಾರಿಗಳು ಮುಂದಾಗಬೇಕಿದೆ. ಅನರ್ಹ ಪಡಿತರ ಚೀಟಿದಾರರನ್ನು ಗುರುತಿಸಬೇಕು. ಯುವ ನಿಧಿ ಯೋಜನೆಯಡಿ ಈಗಾಗಲೇ ರೂ.13.34 ಕೋಟಿ ಹಣವನ್ನು ಪಾವತಿಸಲಾಗಿದೆ. ಅರ್ಹ ಫಲಾನುಭವಿಗಳನ್ನು ಯೋಜನೆಯಡಿ ನೋಂದಣಿ ಮಾಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.