ನಟ ಸೋನು ಸೂದ್ ವಿರುದ್ದ ಎಫ್ ಐಆರ್ ದಾಖಲು
ಚಂಡೀಗಡ: ಫೆಬ್ರವರಿ 22: ಮತದಾನದ ದಿನದಂದು ತಮ್ಮ ಸಹೋದರಿ ಮತ್ತು ಕಾಂಗ್ರೆಸ್ ನಾಯಕಿ ಮಾಳವಿಕಾ ಸೂದ್ ಅವರ ಪರವಾಗಿ ಪ್ರಚಾರ ಮಾಡಿದ್ದಕ್ಕಾಗಿ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಮೊಗಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೊಗಾದ ಮತಗಟ್ಟೆಗೆ ಸೋನು ಸೂದ್ ಪ್ರವೇಶಿಸಲು ಯತ್ನಿಸಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಮತದಾನ ನಡೆಯುತ್ತಿದ್ದ ವೇಳೆಯೇ ಸೋನು ಸೂದ್ ಅವರು ಒಂದು ಮತಗಟ್ಟೆಯಿಂದ ಮತ್ತೊಂದು ಮತಗಟ್ಟೆಗೆ ತೆರಳಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ತದನಂತರ ಶಿರೋಮಣಿ ಅಕಾಲಿದಳದ ಅಭ್ಯರ್ಥಿಯೂ ಸೋನು ಸೂದ್ ಮೇಲೆ ದೂರು ದಾಖಲಿಸಿದ್ದಾರೆ.
ಈಗ ಮೂಲಗಳ ಪ್ರಕಾರ, ಚುನಾವಣಾ ಆಯೋಗದ ಜೊತೆ ಮಾತನಾಡಿದ ಮೋಗಾ ಪೊಲೀಸರು ಸೋನು ಸೂದ್ ವಿರುದ್ಧ ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ (ಎಂಸಿಸಿ) ಕುರಿತು ಜಿಲ್ಲಾಧಿಕಾರಿಗಳು ಹೊರಡಿಸಿದ ನಿಷೇಧಾಜ್ಞೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಟನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸೋನು ಸೂದ್ ಅವರ ಕಾರನ್ನು ಜಪ್ತಿ ಮಾಡಿ ಮನೆಗೆ ಕಳುಹಿಸಲಾಗಿದೆ. ಮನೆಯಿಂದ ಹೊರ ಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೊಗಾ ಜಿಲ್ಲಾ ಪಿಆರ್ ಒ ಪ್ರದ್ಭದೀಪ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.