ಬೆಳಗಾವಿ

ಕಂಗೋಳಿ ರಸ್ತೆ ದುರಸ್ತಿಗೆ ಆಗ್ರಹಿಸಿ ರೈತರು, ಮಾಜಿ ಸೈನಿಕರಿಂದ ಪ್ರತಿಭಟನೆ

ಕಂಗೋಳಿ ರಸ್ತೆ ದುರಸ್ತಿಗೆ ಆಗ್ರಹಿಸಿ ರೈತರು, ಮಾಜಿ ಸೈನಿಕರಿಂದ ಪ್ರತಿಭಟನೆ

ಸಂಬರಗಿ 02: ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ಗಡಿ ಭಾಗದಲ್ಲಿರುವ ಮಹಾರಾಷ್ಟ್ರವನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳ ಅಭಿವೃದ್ಧಿ ಇನ್ನೂ ನಿರ್ಲಕ್ಷ್ಯಕ್ಕೊಳಗಾಗಿದೆ ಎಂದು ಆರೋಪಿಸಿ,  ರಸ್ತೆ ದುರಸ್ತಿಗೆ ಆಗ್ರಹಿಸಿ ರೈತರು ಹಾಗೂ ಮಾಜಿ ಸೈನಿಕರು ರಸ್ತೆ ಮಧ್ಯೆ ಕಬ್ಬು ನೆಟ್ಟು ಪ್ರತಿಭಟನೆ ನಡೆಸಿದರು.  

ರಸ್ತೆ ದುರಸ್ತಿ ಕುರಿತು ಜಿಲ್ಲಾಧಿಕಾರಿ, ತಹಶೀಲ್ದಾರ್, ಜಿಲ್ಲಾ ಪಂಚಾಯಿತಿ ಎಂಜಿನಿಯರ್, ಸಂಸದ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇತರ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಮುಂದಾಗಿರುವುದಾಗಿ ಪ್ರತಿಭಟನಾಕಾರರು ತಿಳಿಸಿದರು.  

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಾಳು ದಾದಾ ಹಜಾರೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಪ್ರತಿಭಟನಾಕಾರರು, ರಸ್ತೆಯಲ್ಲಿ ಆಳವಾದ ಗುಂಡಿಗಳು ಉಂಟಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಯ ಸಾಮರ್ಥ್ಯಕ್ಕಿಂತ ಹೆಚ್ಚಿನ ಭಾರ ಹೊತ್ತ ವಾಹನಗಳ ಸಂಚಾರವೂ ರಸ್ತೆಯ ಹದಗೆಡಲು ಕಾರಣವಾಗಿದೆ ಎಂದು ದೂರಿದರು.  

ಶೀಘ್ರವೇ ರಸ್ತೆ ದುರಸ್ತಿ ಕಾಮಗಾರಿ ಆರಂಭಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು. ಅಗತ್ಯವಿದ್ದರೆ ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.  

ಪ್ರತಿಭಟನೆಯಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು, ರೈತ ಸಂಘದ ಪದಾಧಿಕಾರಿಗಳು, ಮಾಜಿ ಸೈನಿಕರು ಹಾಗೂ ಮಹಿಳಾ ಸಂಘದ ಸದಸ್ಯರು ಸೇರಿದಂತೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. 


ಸುದ್ದಿ ಓದಿ