ತುಂಗಭದ್ರಾ ನದಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

ತುಂಗಭದ್ರಾ ನದಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರ ಪ್ರತಿಭಟನೆ  Farmers protest demanding the release of water into the Tungabhadra River

ಲೋಕದರ್ಶನ ವರದಿ

ಕಂಪ್ಲಿ, 14:  ತಾಲೂಕಿನ ಇಟಗಿ ಗ್ರಾಮದ ಬಳಿ ತುಂಗಭದ್ರಾ ನದಿಯಲ್ಲಿ ನೀರಿಲ್ಲದೆ ಜನರು ಹಾಗೂ ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ನದಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು, ಇಟಗಿ, ಸಣಾಪುರ, ನಂ.2 ಮುದುದಾಪುರ ಸೇರಿದಂತೆ ವಿವಿಧ ಗ್ರಾಮಗಳ ಜನರು ಮಂಗಳವಾರ ಪ್ರತಿಭಟನೆ ನಡೆಸಿದರು.  

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಬಿ.ವಿ.ಗೌಡ ಮಾತನಾಡಿ, ತಾಲೂಕು ವ್ಯಾಪ್ತಿಯ ಇಟಗಿ ಬಳಿ ಹರಿಯುವ ತುಂಗಭದ್ರಾ ನದಿಯಲ್ಲಿ ನೀರು ಸಂಪೂರ್ಣ ಬತ್ತಿಹೋಗಿದೆ. ಈ ಬಾರಿ ಮಳೆಯ ಕೊರತೆಯಿಂದ ಅಂತರ್ಜಲ ಮಟ್ಟ ಕುಸಿದಿದ್ದು, ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಜನರು ಹಾಗೂ ಜಾನುವಾರುಗಳು ನೀರಿಗಾಗಿ ಪ್ರತಿದಿನ ಪರದಾಡುವಂತಾಗಿದೆ ಎಂದು ಹೇಳಿದರು.  

ಮಲೆನಾಡು ಭಾಗದಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಲ್ಲಿ ಸುಮಾರು 20 ಟಿಎಂಸಿ ನೀರು ಸಂಗ್ರಹವಾಗಿದೆ. ಇದರಲ್ಲಿ ಸ್ವಲ್ಪ ಪ್ರಮಾಣದ ನೀರನ್ನು ನದಿಗೆ ಹರಿಸಿದರೆ ಇಟಗಿ, ಸಣಾಪುರ ಸೇರಿದಂತೆ ನದಿ ಪಾತ್ರದ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ ಅನುಕೂಲವಾಗಲಿದೆ ಎಂದು ಅವರು ಒತ್ತಾಯಿಸಿದರು.  

ರೈತ ಮುಖಂಡ ಇಟಗಿ ಶರಣೇಗೌಡ ಮಾತನಾಡಿ, ಮಳೆಯ ಅಭಾವದಿಂದ ಅಂತರ್ಜಲ ಕುಸಿದಿದ್ದು, ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಒಂದು ಅಥವಾ ಎರಡು ದಿನಗಳಲ್ಲಿ ನದಿಗೆ ನೀರು ಹರಿಸದಿದ್ದರೆ, ಈ ಭಾಗದ ರೈತರೆಲ್ಲರೂ ಒಗ್ಗೂಡಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು. ಮನವಿಗೆ ಸ್ಪಂದನೆ ದೊರೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.  

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಎ. ನಾಗರಾಜಗೌಡ, ವೆಂಕಟರಾಮರಾಜು, ವೈ. ರಮಣಯ್ಯ, ಜಿ. ಈರಣ್ಣ, ರಾಮರಾಜು, ಕೃಷ್ಣರಾಜು, ವೀರೇಶ್, ಅಚ್ಚುತರಾಯ ವರ್ಮ, ಕೆ. ರಘುರಾಮ್, ರಾಮಣ್ಣ, ಕೆ. ಚಂದ್ರ​‍್ಪ, ಗುಂಡೂರಾವ್, ನಾರಾಯಣಾಚಾರ್, ಎಂ. ಸತ್ಯಪ್ಪ, ಸಿದ್ದಲಿಂಗಪ್ಪಗೌಡ ಸೇರಿದಂತೆ ಇಟಗಿ, ಸಣಾಪುರ, ನಂ.2 ಮುದುದಾಪುರ, ಮಣ್ಣೂರು, ಕ್ಯಾಂಪ್ಗಳ ರೈತರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.