ಪುಲ್ವಾಮದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರು ಹತ, ಓರ್ವ ನಾಗರಿಕನಿಗೆ ಗಾಯ
ಶ್ರೀನಗರ, ಡಿಸೆಂಬರ್.9: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆ ನಡೆಸಿದ ಶೋಧ ಕಾರ್ಯಾಚರಣೆಯ
ವೇಳೆ ಉಂಟಾದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಇದೇ ವೇಳೆ ಓರ್ವ ನಾಗರಿಕರೊಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಪುಲ್ವಾಮದ ಟಿಕನ್ ಗ್ರಾಮದಲ್ಲಿ ಬುಧವಾರ ಬೆಳಗ್ಗಿನ ಜಾವ ರಾಷ್ಟ್ರೀಯ ರೈಫಲ್ಸ್, ಸಿಆರ್ ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸ್ ನ ವಿಶೇಷ ಕಾರ್ಯಾಚರಣಾ ಪಡೆ ಜಂಟಿ ಕಾರ್ಯಾಚರಣೆ ನಡೆಸಿದೆ.
ಆದಾಗ್ಯು, ಗ್ರಾಮದ ನಿರ್ದಿಷ್ಟ ಪ್ರದೇಶಕ್ಕೆ ಭದ್ರತಾ ಪಡೆ ತಲುಪಿದಾಗ, ಅಡಗಿ ಕುಳಿತಿದ್ದ ಉಗ್ರರು ಸ್ವಯಂಚಾಲಿತ ಬಂದೂಕುಗಳಿಂದ ಗುಂಡಿನ ದಾಳಿ ನಡೆಸಿದರು. ಈ ವೇಳೆ ಗುಂಡಿನ ಚಕಮಕಿ ನಡೆದಿದೆ.
ಈ ವೇಳೆ ಇಬ್ಬರು ಉಗ್ರರು ಸಾವನ್ನಪ್ಪಿದ್ದು, ಅಲ್ಲಿಂದ ಕೊನೆಯ ಬಾರಿಗೆ ವರದಿ ಬಂದಾಗಲೂ ಗುಂಡಿನ ಚಕಮಕಿ ನಡೆಯುತ್ತಿತ್ತು. ನಾಗರಿಕ ಸಾದಿಕ್ ಲೋನ್ ಎಂಬವರು ಗಾಯಗೊಂಡಿದ್ದಾರೆ.
ವದಂತಿ ಹರಡದಂತೆ ತಡೆಯಲು ಪುಲ್ವಾಮದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.