ಬದುಕಬೇಕು ನಂತರ ಬದುಕು ಕಟ್ಟಿಕೊಳ್ಳಬೇಕು : ಡಾ. ಸ.ಚಿ. ರಮೇಶ
ಹಂಪಿ 14: ಎಲ್ಲರ ಮನಸ್ಸಿನಲ್ಲಿ ಲಸಿಕೆಯ ಬಗ್ಗೆ ಅನುಮಾನ ಇದೆ, ಲಸಿಕೆ ಹಾಕಿಸಿಕೊಂಡರೆ ಅಡ್ಡಪರಿಣಾಮಗಳು ಉಂಟಾಗುತ್ತದೆ ಎಂದು ಜನರು ಭಯಭೀತರಾಗಿದ್ದಾರೆ. ಆದರೆ ಯಾವುದೇ ಅನುಮಾನ ಬೇಡ, ಲಸಿಕೆ ಹಾಕಿಸಿಕೊಂಡರೆ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಯಾವುದೇ ಅಡ್ಡಪರಿಣಾಮ ಬೀರುವುದಿಲ್ಲ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಸ.ಚಿ. ರಮೇಶ ಅವರು ತಿಳಿಸಿದರು.
ಕನ್ನಡ ವಿಶ್ವವಿದ್ಯಾಲಯದ ನುಡಿ ಕಟ್ಟಡದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಕನ್ನಡ ವಿಶ್ವವಿದ್ಯಾಲಯ, ಹಂಪಿ ಹಾಗೂ ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹೊಸಪೇಟೆ ಇವರ ಸಂಯುಕ್ತಾಶ್ರಯದಲ್ಲಿ ಕೋವಿಡ್-19 ಲಸಿಕಾ ಅಭಿಯಾನವನ್ನು ಆಯೋಜಿಸಿದ್ದು ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಎ. ಸುಬ್ಬಣ್ಣ ರೈ ಅವರು ಲಸಿಕೆ ಹಾಕಿಸಿಕೊಳ್ಳುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಕುಲಪತಿ ಅವರು ಕನ್ನಡ ವಿಶ್ವವಿದ್ಯಾಲಯವು ಕೇವಲ ಶೈಕ್ಷಣಿಕ ಸಂಸ್ಥೆಯಲ್ಲ, ಇದು ಜನಸ್ನೇಹಿ ಸಂಸ್ಥೆ. ಈ ನಿಟ್ಟಿನಲ್ಲಿ ಕನ್ನಡ ವಿಶ್ವವಿದ್ಯಾಲಯದ ಎಲ್ಲಾ ಸಿಬ್ಬಂದಿಗಳಿಗೆ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನವನ್ನು ಆಯೋಜನೆ ಮಾಡಲಾಗುತ್ತಿದ್ದು ಇದರ ಸದುಪಯೋಗವನ್ನು ಎಲ್ಲಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕೋವಿಡ್-19 ಲಸಿಕೆ ಪಡೆದುಕೊಂಡರೆ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸಬಹುದು ತಿಳಿಸಿದರು. ಹೊಸಪೇಟೆ ತಾಲ್ಲೂಕು ವೈದ್ಯಾಧಿಕಾರಿಗಳಾದ ಡಾಕ್ಟರ್ ಯಶಸ್ವಿನಿ ಮಾತನಾಡಿದರು. ಪ್ರತಿಯೊಬ್ಬರಿಗೂ ಕೂಡ ಆದ್ಯತೆಯ ಮೇರೆಗೆ ಲಸಿಕೆಯನ್ನು ನೀಡಲಾಗುತ್ತಿದೆ, ಸರ್ಕಾರದ ನಿಯಮಗಳನ್ನು ಪಾಲಿಸಿ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸುವ ಉದ್ದೇಶದಿಂದ ಕನ್ನಡ ವಿಶ್ವವಿದ್ಯಾಲಯದಲ್ಲಿ ಇಂದು ಲಸಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಲಸಿಕಾ ಅಭಿಯಾನದ ಆರಂಭದ ದಿನಗಳಲ್ಲಿ ಜನರಿಗೆ ಲಸಿಕೆಯ ಬಗ್ಗೆ ಅನುಮಾನ ಹಾಗೂ ಭಯದ ವಾತಾವರಣವಿತ್ತು. ಆದರೆ ಇಂದು ಲಸಿಕೆಯನ್ನು ಹಾಕಿಸಿಕೊಳ್ಳಲು ಪರದಾಡುತ್ತಿದ್ದಾರೆ. ಈ ನಿರ್ಲಕ್ಷ-್ಯ ಮನೋಭಾವ ಬೇಡ ಸಕಾಲಕ್ಕೆ ಸರಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಕೋವಿಡ್-19 ಲಸಿಕೆಯಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಡಾ. ಎ. ಸುಬ್ಬಣ್ಣ ರೈ ಅವರು ಉಪಸ್ಥಿತರಿದ್ದರು. ಎನ್.ಎಸ್.ಎಸ್ ಘಟಕದ ಸಂಯೋಜನಾಧಿಕಾರಿಗಳಾದ ಡಾ. ಅಮರೇಶ ಯತಗಲ್ ಅವರು ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಕೋವಿಡ್-19 ನೋಡಲ್ ಅಧಿಕಾರಿಗಳಾದ ಡಾ. ವೆಂಕಟಗಿರಿ ದಳವಾಯಿ, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ಆಡಳಿತ ಸಿಬ್ಬಂದಿಗಳು ಹಾಗೂ ಸಿಬ್ಬಂದಿಗಳ ಕುಟುಂಬ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.