ವಿಜಯಪುರ

ಉಚಿತ ಕಾನೂನು ನೆರವು ಅರ್ಹರಿಗೆ ಲಭ್ಯ: ನ್ಯಾ. ಅರವಿಂದ ಎಸ್‌. ಹಾಗರಗಿ

ಉಚಿತ ಕಾನೂನು ನೆರವು ಅರ್ಹರಿಗೆ ಲಭ್ಯ: ನ್ಯಾ. ಅರವಿಂದ ಎಸ್‌. ಹಾಗರಗಿ

             ವಿಜಯಪುರ 12 :  ಸಮಾಜದ ಬಡವರು, ನಿರ್ಗತಿಕರು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ನ್ಯಾಯ ದೊರಕಿಸುವಲ್ಲಿ ಉಚಿತ ಕಾನೂನು ನೆರವು ಮಹತ್ವದ ಪಾತ್ರ ವಹಿಸುತ್ತದೆ. ಆರ್ಥಿಕ ಪರಿಸ್ಥಿತಿಯು ಯಾವುದೇ ವ್ಯಕ್ತಿಯ ನ್ಯಾಯ ಪಡೆಯುವ ಹಕ್ಕಿಗೆ ಅಡ್ಡಿಯಾಗಬಾರದು ಎಂದು ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್‌. ಹಾಗರಗಿ ಹೇಳಿದರು.

            ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತದ ಸಂವಿಧಾನದ ಅನುಚ್ಛೇದ 39ಎ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಕಾಯ್ದೆ1987ರ ಆಶಯಗಳನ್ನು ವಿವರಿಸಿದ ಅವರು, ಬಡವರು, ಮಹಿಳೆಯರು, ಕಾರ್ಮಿಕರು, ನಿರ್ಗತಿಕರು ಸೇರಿದಂತೆ ನ್ಯಾಯಾಲಯದ ಮೆಟ್ಟಿಲೇರಲು ಆರ್ಥಿಕವಾಗಿ ಅಸಮರ್ಥರಾದವರಿಗೆ ಉಚಿತ ಕಾನೂನು ಸೇವೆ ಒದಗಿಸುವುದು ಮಹತ್ವದ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

             ಕಾನೂನು ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳ ಜ್ಞಾನಕ್ಕೆ ಸೀಮಿತವಾಗದೆ, ಸಮಾಜದ ಸಮಸ್ಯೆಗಳನ್ನು ಅರಿತುಕೊಳ್ಳಬೇಕು. ಜನಸಾಮಾನ್ಯರಲ್ಲಿ ಕಾನೂನಿನ ಅರಿವು ಮೂಡಿಸುವುದರ ಜೊತೆಗೆ ನ್ಯಾಯ ದೊರಕಿಸಿಕೊಡುವ ಸಾಮಾಜಿಕ ಕಾರ್ಯಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಸ್‌.ಎಸ್‌. ಪುಣೆಕರ್, ಮಹಾವಿದ್ಯಾಲಯದಲ್ಲಿ  ಕಾನೂನು ನೆರವು ಘಟಕವನ್ನು ಪ್ರಾರಂಭಿಸಿದ್ದು, ಕಾನೂನು ಸಲಹೆ ಮಾರ್ಗದರ್ಶನ ಲಭ್ಯವಿದೆ,

            ಇದರ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಜವಾಬ್ದಾರಿ ಕಾನೂನು ವಿದ್ಯಾರ್ಥಿಗಳ ಮೇಲಿದೆ ಎಂದರು. ಈ ಘಟಕದ ಮೂಲಕ ಬಡವರು, ಮಹಿಳೆಯರು, ಕಾರ್ಮಿಕರು ಹಾಗೂ ಸಮಾಜದ ದುರ್ಬಲ ವರ್ಗದ ಜನರಿಗೆ ಕಾನೂನು ಮಾರ್ಗದರ್ಶನ ಮತ್ತು ನೆರವು ಒದಗಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದರು.ಕಾನೂನು ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸುವುದು,

              ಅವರ ಕಾನೂನು ಹಕ್ಕುಗಳ ಕುರಿತು ಜಾಗೃತಿ ಮೂಡಿಸುವುದು ಹಾಗೂ ಅರ್ಹ ಫಲಾನುಭವಿಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಅಗತ್ಯ ನೆರವು ದೊರಕಿಸಿಕೊಡುವುದು ಘಟಕದ ಪ್ರಮುಖ ಉದ್ದೇಶವಾಗಿದೆ ಎಂದು ವಿವರಿಸಿದರು.ಎಲ್ಲರಿಗೂ ನ್ಯಾಯ ಎಂಬ ಆಶಯವನ್ನು ಸಾಕಾರಗೊಳಿಸುವಲ್ಲಿ ಮಹಾವಿದ್ಯಾಲಯದ ಕಾನೂನು ನೆರವು ಘಟಕವು ಪರಿಣಾಮಕಾರಿ ವೇದಿಕೆಯಾಗಲಿದೆ ಎಂಬ ವಿಶ್ವಾಸವನ್ನು ಕಾರ್ಯಕ್ರಮದಲ್ಲಿ ವ್ಯಕ್ತಪಡಿಸಲಾಯಿತು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರು, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಮಲ್ಲಿಕಾರ್ಜುನ ಎ, ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ