ಗ್ರಾಮೀಣ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಲು ಜಿಪಂ ಸಿಇಒ ಸೂಚನೆ
ಲೋಕದರ್ಶನ ವರದಿ
ವಿಜಯಪುರ ಆ.6 : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಜಿಎನ್ಆರಿ್ಜಎ) ಅಡಿಯಲ್ಲಿ ಗ್ರಾಮೀಣ ಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸುವುದರ ಜೊತೆಗೆ ಕಾಮಗಾರಿ ಸ್ಥಳಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ನಾಗಠಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕೆರೆ ಪುನಶ್ಚೇತನ ಕಾಮಗಾರಿಗೆ ಭೇಟಿ ನೀಡಿ ಪರೀಶೀಲಿಸಿದ ಅವರು, ಕಾಮಗಾರಿಯ ಪ್ರಗತಿ, ಗುಣಮಟ್ಟ, ಕಾರ್ಮಿಕರ ಹಾಜರಾತಿ ಹಾಗೂ ಮಾನವ ದಿನಗಳ ಸೃಜನೆ ಕುರಿತು ಮಾಹಿತಿ ಪಡೆದರು.
ಕಾರ್ಮಿಕರಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಪ್ರಾಥಮಿಕ ಚಿಕಿತ್ಸೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಕೂಲಿ ಪಾವತಿಯಲ್ಲಿ ಯಾವುದೇ ತಾಂತ್ರಿಕ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಎಲ್ಲ ಕಾರ್ಮಿಕರ ಫೇಸ್ ಅಥೆಂಟಿಕೇಶನ್ ಪೂರ್ಣಗೊಳಿಸಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಎಂಜಿಎನ್ಆರಿ್ಜಎ ಅಡಿಯಲ್ಲಿ ಗ್ರಾಮೀಣ ಕುಟುಂಬಗಳಿಗೆ ವರ್ಷಕ್ಕೆ 125 ದಿನಗಳ ಉದ್ಯೋಗ ಹಾಗೂ ಪ್ರತಿದಿನ ರೂ.382 ಕೂಲಿ ನೀಡಲಾಗುತ್ತಿದೆ. ಕೃಷಿ ಹೊಂಡ, ದನದ ಕೊಟ್ಟಿಗೆ, ಮೇಕೆ ಶೆಡ್, ತೋಟಗಾರಿಕೆ ಅಭಿವೃದ್ಧಿ ಸೇರಿದಂತೆ ಹಲವು ವೈಯಕ್ತಿಕ ಕಾಮಗಾರಿಗಳಿಗೆ ಅವಕಾಶವಿದ್ದು, ಗ್ರಾಮೀಣ ಕುಟುಂಬಗಳು ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.
ಶಾಲೆಯಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಹಾಜರಾತಿ ಶೇ.100ರಷ್ಟು ಇರಬೇಕು. ಸ್ವಚ್ಛತೆ, ಶಿಸ್ತು, ಕ್ರೀಡೆ, ದೈಹಿಕ ಶಿಕ್ಷಣ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳುವಂತೆ ತಿಳಿಸಿದರು.
ಈ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ, ಸಹಾಯಕ ನಿರ್ದೇಶಕ ಎಸ್.ಆರ್.ಕಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.