ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಗದಗ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೂಚನೆ
ಗದಗ 15 : ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಸಂಭ್ರಮದಿಂದ ಆಚರಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಅಚರಣೆಯ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಸಮಿತಿಯವರು ತಮಗೆ ವಹಿಸಿದ ಕೆಲಸವನ್ನು ನಿರ್ವಹಿಸಿ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಬೇಕೆಂದು ಸೂಚಿಸಿದರು.ಪ್ರತಿ ವರ್ಷದಂತೆ ಈ ವರ್ಷವೂ ಸಹ ಕನ್ನಡ ರಾಜ್ಯೋತ್ಸವದ ದಿನದ ಹಿಂದಿನ ದಿನ ಹಾಗೂ ಕನ್ನಡ ರಾಜ್ಯೋತ್ಸವದ ದಿನ ಎರಡು ದಿನ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಮಿಥುನ್ ಎಚ್.ಎನ್, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪವಿಬಾಗಾಧಿಕಾರಿ ಗಂಗಪ್ಪ ಎಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ.ಮಸನಾಯಕ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ಡಿಡಿಎಲ್ಆರ್ ರುದ್ರನಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.