ಹಾವೇರಿ

ಗಾಂಧೀ - ಶಾಸ್ತ್ರಿ ಜಯಂತಿ: ಸೌಹಾರ್ದ ನಡಿಗೆಗೆ ಚಾಲನೆ

ಗಾಂಧೀ - ಶಾಸ್ತ್ರಿ  ಜಯಂತಿ: ಸೌಹಾರ್ದ ನಡಿಗೆಗೆ ಚಾಲನೆ

ಲೋಕದರ್ಶನ ವರದಿ 

ಹಾವೇರಿ 02:  ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.  

 ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಗಾಂಧೀಜಿ ಅವರ ಸತ್ಯ, ಅಹಿಂಸೆ, ಸ್ವಚ್ಛತೆ, ಸ್ವದೇಶಿ ಹಾಗೂ ಸರಳ ಜೀವನದ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಜಗತ್ತಿನಲ್ಲಿ ಶಾಂತಿ ನೆಲೆಸಲು ಗಾಂಧೀಜಿ ಅವರ ತತ್ವಾದರ್ಶಗಳು ಮಾರ್ಗದರ್ಶಕವಾಗಿವೆ ಎಂದು ಹೇಳಿದರು.  

 ಗಾಂಧೀಜಿ ಅವರು ಸತ್ಯಾಗ್ರಹ ಮತ್ತು ಅಹಿಂಸೆಯ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ನೀಡಿದರು. ಸ್ವಚ್ಛತೆ ಹಾಗೂ ಸ್ವಾವಲಂಬನೆಯ ಮಹತ್ವವನ್ನು ಸಾರಿದ ಅವರು, ಗ್ರಾಮ ಮಟ್ಟದಲ್ಲಿ ಆಡಳಿತ ಮತ್ತು ಅಭಿವೃದ್ಧಿ ನಡೆಯಬೇಕು ಎಂಬ ಆಶಯ ಹೊಂದಿದ್ದರು. ಇಂದಿನ ಭಯೋತ್ಪಾದನೆ ಹಾಗೂ ಯುದ್ಧದ ಆತಂಕದ ಸಂದರ್ಭದಲ್ಲಿ ಅವರ ಅಹಿಂಸಾ ಮಾರ್ಗ ಮತ್ತಷ್ಟು ಪ್ರಸ್ತುತವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.  

 ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರು ಸರಳತೆ, ಪ್ರಾಮಾಣಿಕತೆ ಹಾಗೂ ದೇಶಸೇವೆಗೆ ಹೆಸರಾಗಿದ್ದ ನಾಯಕರು. “ಜೈ ಜವಾನ್, ಜೈ ಕಿಸಾನ್‌” ಘೋಷಣೆಯ ಮೂಲಕ ಸೈನಿಕರು ಮತ್ತು ರೈತರ ಕೊಡುಗೆಯನ್ನು ಗೌರವಿಸಿದ ಅವರು, ದೇಶದ ಅಭಿವೃದ್ಧಿಗೆ ಮಾದರಿಯಾಗಿದ್ದಾರೆ. ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶಭಕ್ತಿ ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.  

 ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ವಿವಿಧ ಧರ್ಮಗಳ ಪ್ರತಿನಿಧಿಗಳಿಂದ ಭಗವದ್ಗೀತೆ, ಕುರಾನ್ ಹಾಗೂ ಬೈಬಲ್ ಪಠಣದ ಮೂಲಕ ಸರ್ವಧರ್ಮ ಪ್ರಾರ್ಥನೆ ನಡೆಯಿತು.  


ಸುದ್ದಿ ಓದಿ