ಗೌರಿ-ಗಣೇಶ ಹಬ್ಬ: ಶಾಂತಿಯುತ ಆಚರಣೆಗೆ ಏಕಗವಾಕ್ಷಿ ಸಮಿತಿ ರಚನೆ

ಗೌರಿ-ಗಣೇಶ ಹಬ್ಬ: ಶಾಂತಿಯುತ ಆಚರಣೆಗೆ ಏಕಗವಾಕ್ಷಿ ಸಮಿತಿ ರಚನೆ  Gauri-Ganesha Festival: Single-window committee formed for peaceful celebration

ಲೋಕದರ್ಶನ ವರದಿ  

ಗದಗ, ಸೆ. 9: ಜಿಲ್ಲಾದ್ಯಂತ ಗೌರಿ-ಗಣೇಶ ಹಬ್ಬವನ್ನು ಶಾಂತಿಯುತವಾಗಿ, ಸುಸಜ್ಜಿತವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸುವ ಉದ್ದೇಶದಿಂದ ಪ್ರತಿ ತಾಲೂಕು ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಏಕಗವಾಕ್ಷಿ ಸಮಿತಿಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ ತಿಳಿಸಿದ್ದಾರೆ.  

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮೆರವಣಿಗೆ ಮೂಲಕ ವಿಸರ್ಜನಾ ಕಾರ್ಯಕ್ರಮಗಳು ನಡೆಯಲಿರುವುದರಿಂದ, ಪೊಲೀಸ್ ಇಲಾಖೆ ಸೇರಿದಂತೆ ಅಗ್ನಿಶಾಮಕ ದಳ, ಲೋಕೋಪಯೋಗಿ ಇಲಾಖೆ, ವಿದ್ಯುತ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಕಂದಾಯ ಇಲಾಖೆಗಳನ್ನೊಳಗೊಂಡ ಏಕಗವಾಕ್ಷಿ ಸಮಿತಿಗಳನ್ನು ರಚಿಸಲಾಗಿದೆ.  

ಸಂಬಂಧಪಟ್ಟ ಪೊಲೀಸ್ ಠಾಣೆಯ ಆರಕ್ಷಕ ಉಪನೀರೀಕ್ಷಕರು ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ತಾಲೂಕು ತಹಶೀಲ್ದಾರರು ನೋಡಲ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಗಣೇಶೋತ್ಸವಕ್ಕೆ ಸಂಬಂಧಿಸಿದ ಅರ್ಜಿಗಳನ್ನು ತ್ವರಿತವಾಗಿ ಪರೀಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.  

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸಲ್ಲಿಕೆಯಾಗುವ ಅರ್ಜಿಗಳಿಗೆ ಸಂಬಂಧಿಸಿದ ಇಲಾಖೆಗಳು ತಮ್ಮ ಅಭಿಪ್ರಾಯವನ್ನು ನೀಡಬೇಕು. ಅರ್ಜಿ ಸ್ವೀಕರಿಸಿದ 24 ಗಂಟೆಗಳೊಳಗೆ ಅರ್ಜಿದಾರರಿಗೆ ಅನುಮತಿ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.  

ಹಬ್ಬದ ಸಂದರ್ಭದಲ್ಲಿ ಸಮಿತಿ ಸದಸ್ಯ ಇಲಾಖೆಗಳು ನಿರಂತರ ಸಂಪರ್ಕದಲ್ಲಿದ್ದು, ತಮ್ಮ ವ್ಯಾಪ್ತಿಯ ಕೇಂದ್ರ ಸ್ಥಾನಗಳಲ್ಲಿ ಹಾಜರಿದ್ದು ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸಬೇಕು. ಗಣೇಶೋತ್ಸವಕ್ಕೆ ಅನುಮತಿ ನೀಡುವ ಮೊದಲು ಆಯೋಜಕರಿಂದ ನ್ಯಾಯಾಲಯದ ನಿರ್ದೇಶನಗಳು ಹಾಗೂ ಸರ್ಕಾರದ ವಿವಿಧ ಇಲಾಖೆಗಳು ಕಾಲಕಾಲಕ್ಕೆ ನೀಡಿರುವ ಸೂಚನೆಗಳನ್ನು ಪಾಲಿಸುವ ಕುರಿತು ಮುಚ್ಚಳಿಕೆ ಪಡೆಯಬೇಕು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಬಗ್ಗೆಯೂ ಆಯೋಜಕರಿಂದ ಖಾತರಿ ಪಡೆಯಬೇಕು ಎಂದು ತಿಳಿಸಲಾಗಿದೆ.  

ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಆಯೋಜಕರಿಗೆ ಸೂಚಿಸಬೇಕು. ಅಗತ್ಯವಿರುವ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.  

ವಿಶೇಷವಾಗಿ ಹೈಟೆನ್ಶನ್ ವಿದ್ಯುತ್ ತಂತಿಗಳು ಹಾದುಹೋಗಿರುವ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬಾರದು ಎಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.