ತುಟ್ಟಿಭತ್ಯೆ ಹೆಚ್ಚಳಕ್ಕೆ ಸರ್ಕಾರಿ ನೌಕರರ ಹರ್ಷ
ಲೋಕದರ್ಶನ ವರದಿ
ಇಂಡಿ 05: ರಾಜ್ಯ ಸರ್ಕಾರವು ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 2.50 ರಷ್ಟು ಹೆಚ್ಚಳ ಮಾಡಿರುವುದಕ್ಕೆ ಇಂಡಿ ತಾಲ್ಲೂಕಿನ ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಂಕರ ಕೋಳೆಕರ ಅವರು ಹರ್ಷ ವ್ಯಕ್ತಪಡಿಸಿ, ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಸಮಸ್ತ ಶಿಕ್ಷಕರ ಮತ್ತು ಸರ್ಕಾರಿ ನೌಕರರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಸರ್ಕಾರಿ ನೌಕರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ತುಟ್ಟಿಭತ್ಯೆ ಹೆಚ್ಚಳದ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹವಾಗಿದೆ. ಬೆಲೆ ಏರಿಕೆಯ ಈ ಸಂದರ್ಭದಲ್ಲಿ ತುಟ್ಟಿಭತ್ಯೆ ಹೆಚ್ಚಳವು ನೌಕರರಿಗೆ ಆರ್ಥಿಕವಾಗಿ ಕೊಂಚ ನೆಮ್ಮದಿ ನೀಡಲಿದೆ. ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರವು ಇದೇ ರೀತಿ ಸಕಾರಾತ್ಮಕವಾಗಿ ಸ್ಪಂದಿಸಲಿ ಎಂದು ಆಶಯ ವ್ಯಕ್ತಪಡಿಸಿದ ಅವರು, ರಾಜ್ಯದ ಸಮಸ್ತ ಸರ್ಕಾರಿ ನೌಕರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.