ಜನರ ಬಳಿಗೆ ಸರ್ಕಾರದ ಸೇವೆ; ಬಳ್ಳಾರಿ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ 15: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಉದ್ದೇಶ ಕೇವಲ ಆರ್ಥಿಕ ನೆರವು ನೀಡುವುದಲ್ಲ. ಸಮಾಜದ ಎಲ್ಲ ವರ್ಗಗಳ ಬಡವರು, ಮಹಿಳೆಯರು, ಮಕ್ಕಳು ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಪ್ರತಿಯೊಬ್ಬರಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು ಎಂಬ ಆಶಯ ಸರ್ಕಾರದ್ದಾಗಿದೆ.
ಜನರ ಜೀವನಮಟ್ಟ ಸುಧಾರಿಸುವುದರ ಜತೆಗೆ ಬಳ್ಳಾರಿ ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹಲವು ಮಹತ್ವದ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.
ಸರ್ಕಾರದ ವಿವಿಧ ಇಲಾಖೆಗಳ ಸೌಲಭ್ಯಗಳು ಹಾಗೂ ಯೋಜನೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಬಳ್ಳಾರಿ ತಾಲ್ಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿರುವ ‘ಸರ್ಕಾರ ಬಾಗಿಲಿಗೆ ಬಂತು,
ಸರ್ಕಾರ ಸೇವೆಗೆ ಇರಲಿ ಸಹಕಾರ’ ಎಂಬ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದ ಅಂಗವಾಗಿ ನಗರದ ಬಂಡಿಮೋಟ್ ಪ್ರದೇಶದ ಎಪಿಎಂಸಿ ಮುಖ್ಯ ಹರಾಜು ಮಾರುಕಟ್ಟೆ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಜಾಸೇವಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಮಹಾನಗರ ಪಾಲಿಕೆ, ಜೆಸ್ಕಾಂ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಮೀನುಗಾರಿಕೆ ಇಲಾಖೆ, ಕೃಷಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ವಿವಿಧ ಇಲಾಖೆಗಳ ವತಿಯಿಂದ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳು, ಸೌಲಭ್ಯಗಳು ಹಾಗೂ ಸೇವೆಗಳ ಕುರಿತು ಮಾಹಿತಿ ನೀಡುವ ವ್ಯವಸ್ಥೆ ಕಲ್ಪಿಸಲಾಗಿತ್ತು.ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿದಾನಂದಪ್ಪ, ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಅಧ್ಯಕ್ಷ ನಾಗಭೂಷಣ್,
ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಎಸ್., ತಹಶೀಲ್ದಾರ್ ನರಸಪ್ಪ, ಪಾಲಿಕೆ ಸದಸ್ಯರಾದ ನೂರು ಮಹಮದ್, ಮಿಂಚು ಶ್ರೀನಿವಾಸ್, ರಾಜೇಶ್ವರಿ ಸುಬ್ಬರಾಯುಡು, ರವಿ, ಚಿದಾನಂದಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.