ಇಂಡಿ

ಗ್ರಾಮ ಪಂಚಾಯಿತಿ ನೌಕರರ ಮುಷ್ಕರ * ಜನರ ಪರದಾಟ

ಗ್ರಾಮ ಪಂಚಾಯಿತಿ ನೌಕರರ ಮುಷ್ಕರ * ಜನರ ಪರದಾಟ

ಇಂಡಿ 04: ರಾಜ್ಯಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿಯ ನೌಕರರ ಮುಷ್ಕರದಿಂದಾಗಿ ಇಂಡಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಕಾರ್ಯಲಯಗಳು ಬೀಕೋ ಅನ್ನುತಿದ್ದವು. ತಮ್ಮ ದೈನಂದಿನ ಕೆಲಸ ಕಾರ್ಯಗಳಿಗಾಗಿ ಬಂದ ಜನರು ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಇಲ್ಲದನ್ನು ಕಂಡು ಬೇಜಾರು ಮಾಡಿಕೊಂಡು ಬಂದ ದಾರಿಗೆ ಸುಂಕ ಇಲ್ಲದಂತೆ ಹೋರಟು ಹೋದರು.  

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕರ ವಸೂಲಿಗಾರರು, ಗುಮಾಸ್ತರು ಮತ್ತು ಡಾಟಾ ಎಂಟ್ರಿ ಆಪರೇಟರ್‌ಗಳು, ನೀರಗಂಟಿಗಳು, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗೆಜೆಟೆಡ್ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರು ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುವ ಧರಣಿಯಲ್ಲಿ ಪಾಲ್ಗೊಂಡು. ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು ಗುರುವಾರವೇ ರಾಜ್ಯ ರಾಜಧಾನಿಯತ್ತ ಹೋಗಿದ್ದಾರೆ. 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ಪಿಡಿಒ ಹುದ್ದೆಗಳನ್ನು ‘ಬಿ’ ಗುಂಪಿನ ಹುದ್ದೆಗಳಾಗಿ ಉನ್ನತೀಕರಿಸುವುದು, ಜ್ಯೇಷ್ಠತಾ ಪಟ್ಟಿ ಅಂತಿಮಗೊಳಿಸುವುದು, ವಿವಿಧ ವೃಂದಗಳ ನೌಕರರಿಗೆ ಸಕಾಲಕ್ಕೆ ಬಡ್ತಿ ನೀಡುವುದು, ಕಾರ್ಮಿಕರ ರಾಜ್ಯ ವಿಮೆ ಮತ್ತು ಭವಿಷ್ಯ ನಿಧಿ ನೀಡುವುದು, ನೇರ ನೇಮಕಾತಿಯಲ್ಲಿ ಆದ್ಯತೆ ನೀಡುವುದು,  

ಸ್ವಾಯತ್ತತೆಗೆ ಆಗ್ರಹ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯಲ್ಲಿರುವ ಜವಾಬ್ದಾರಿ ನಕ್ಷೆಯಂತೆ ಗ್ರಾಮ ಪಂಚಾಯಿತಿಗಳಿಗೆ ಅಧಿಕಾರ ನೀಡುವುದು, ಕರ್ನಾಟಕ ಅಭಿವೃದ್ಧಿ ಸಭೆಗಳ ಬಲವರ್ಧನೆ ಮಾಡುವುದು, ಸ್ಥಾಯಿ ಸಮಿತಿಗಳಿಗೆ ಹೆಚ್ಚಿನ ಅಧಿಕಾರ ನೀಡುವುದು, ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರನ್ನು ರಾಜ್ಯ ಶಿಷ್ಟಾಚಾರದ ವ್ಯಾಪ್ತಿಗೆ ತರುವುದು, ಕೇರಳ ಮಾದರಿಯಲ್ಲಿ ವೇತನ ಮತ್ತು ಭತ್ಯೆ ಪಾವತಿ, ಗ್ರಾಮ ಪಂಚಾಯಿತಿಗಳ ವಿದ್ಯುತ್ ಬಿಲ್ ಬಾಕಿ ಸಮಸ್ಯೆ ಪರಿಹರಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.  

ಏನೇ ಇರಲಿ ನಾಲ್ಕು ದಿನಗಳ ಕಾಲ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದಾಗಿ ಜನ ಹೈರಾಣಾಗಿ ಹೋಗಿದ್ದಾರೆ. ಆದರೆ ಈಗ ಪಂಚಾಯಿತಿ ನೌಕರರ ಮುಷ್ಕರದಿಂದ ಜನರು ಪರದಾಡುವ ಸ್ಥಿತಿ ನಿರ್ಮಾಣವಾಯಿತು. 


ಸುದ್ದಿ ಓದಿ