ಶಾರದಾ ವಿದ್ಯಾ ಸಂಸ್ಥೆಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಶಾರದಾ ವಿದ್ಯಾ ಸಂಸ್ಥೆಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ  Grand Ganesha immersion at Sharada Educational Institution



 ಗಂಗಾವತಿ  21: ನಗರದ ವಿದ್ಯಾನಗರದಲ್ಲಿರುವ ಶ್ರೀ ಶಾರದಾ ವಿದ್ಯಾ ಸಂಸ್ಥೆಯ ವಸತಿ ನಿಲಯದಲ್ಲಿ ಏಳು ದಿನಗಳ ಕಾಲ ಭಕ್ತಿಭಾವದಿಂದ ಪೂಜಿಸಲ್ಪಟ್ಟ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮವು ಭಕ್ತಿ, ಸಂಭ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನೆರವೇರಿತು.  

 ಗಣೇಶೋತ್ಸವದ ಅಂಗವಾಗಿ ವಸತಿ ನಿಲಯದಲ್ಲಿ ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಏಳು ದಿನಗಳ ಕಾಲ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಪ್ರತಿದಿನ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.  

 ವಿಸರ್ಜನಾ ದಿನದಂದು ವಿದ್ಯಾರ್ಥಿಗಳು  ನಾರದಮುನಿ ಹಾಗೂ ಆಂಜನೇಯ ಸೇರಿದಂತೆ ವಿವಿಧ ಪೌರಾಣಿಕ ಪಾತ್ರಗಳ ವೇಷಭೂಷಣ ಧರಿಸಿ ಗಮನ ಸೆಳೆದರು. ವಿದ್ಯಾರ್ಥಿಗಳಿಂದ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳು ನಡೆದವು.  

 ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಸಂಕ್ರಾಂತಿ ಪ್ರಸಾದ್, “ಏಳು ದಿನಗಳ ಕಾಲ ಗಣೇಶನಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಗಿದೆ. ವಿಸರ್ಜನಾ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಪೌರಾಣಿಕ ವೇಷಭೂಷಣಗಳೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

ಇಂತಹ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಧಾರ್ಮಿಕ ಆಚರಣೆಗಳ ಬಗ್ಗೆ ಅರಿವು ಬೆಳೆಸಿಕೊಳ್ಳಬೇಕು. ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿರುವುದು ಸಂತಸದ ವಿಷಯ,” ಎಂದರು.  

 ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳು, ಶಿಸ್ತು, ಸಹಕಾರ ಮನೋಭಾವ ಹಾಗೂ ಪರಂಪರೆಯ ಬಗ್ಗೆ ಗೌರವ ಬೆಳೆಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.  

 ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವಾಧ್ಯಕ್ಷ ಸತ್ಯನಾರಾಯಣ, ಸದಸ್ಯ ಸುಬ್ಬರಾವ್, ವಸತಿ ನಿಲಯದ ಆಡಳಿತಾಧಿಕಾರಿಗಳಾದ ವೀಣಾ, ರಾಮು, ಹುಸೇನ್, ದರ್ಶನ್, ಚಾನ್ ಭಾಷಾ, ಮಂಜುಳಾ, ಜಗದೀಶ್ವರಿ, ಶ್ರೀವಾಣಿ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.